ಬಿದರ: ಕೊರೊನಾ ವೈರಸ್ ಸೋಂಕು ನಿಯಂತ್ರಣ ಕುರಿತು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಕೊರೊನಾ ಸೋಂಕು ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ್ ಬಿಡುಗಡೆ ಮಾಡಿದರು.
ಕೊರೊನಾ ವೈರಸ್ ಕುರಿತು ಭಯಬೇಡ ಎಚ್ಚರವಿರಲಿ, ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಬೇಧಿ ಇವು ರೋಗ ಲಕ್ಷಣಗಳಾಗಿವೆ. ಸೋಂಕಿತ ವ್ಯಕ್ತಿ ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿಯ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಹಸ್ತ ಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿ ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೇ ಬಳಸಿದಾಗ, ಸ್ವಚ್ಛಗೊಳಿಸದ ಅಥವಾ ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದ ಈ ರೋಗ ಹರಡುತ್ತದೆ.
ರೋಗ ಹರಡದಂತೆ ಸಾರ್ವಜನಿಕರು ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು. ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್ ಲೇಯರ್ ಮಾಸ್ಕ್ ಬಳಸಬೇಕು. ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ವಿಶೇಷವಾಗಿ ಆಗ್ಗಾಗೆ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು. ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಅಥವಾ ಕೈವಸ್ತ್ರ ಉಪಯೋಗಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು, ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಮಾಂಸ, ಮೊಟ್ಟೆ ಇತ್ಯಾದಿಗಳನ್ನು ಚೆನ್ನಾಗಿ ಬೇಯಿಸಿ ಉಪಯೋಗಿಸಬೇಕು. ಅಸುರಕ್ಷಿತವಲ್ಲದ ಕಾಡುಪ್ರಾಣಿ ಅಥವಾ ಸಾಕು ಪ್ರಾಣಿಗಳನ್ನು ಮುಟ್ಟಬಾರದು ಎಂಬ ಮಾಹಿತಿಯು ಕರಪತ್ರ ಮತ್ತು ಭಿತ್ತಿಪತ್ರದಲ್ಲಿದೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್, ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಭಂವರ್‍ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಮೇಶ ಕಾಂಬಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.