ಬೆಂಗಳೂರು: ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಬರುವ ಸುಮಾರು 700 ಮೀಟರ್ ಉದ್ದದ ಲಿಂಕ್ ರಸ್ತೆಯು ಹೊಸೂರು ರಸ್ತೆ ಹಾಗೂ ಬಿಟಿಎಂ ಲೇಔಟ್ ನ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಸದರಿ ರಸ್ತೆಗೆ ಅಗತ್ಯವಿರುವ ಜಾಗವನ್ನು ಭೂಸ್ವಾಧೀನ ಪಡಿಸಿಕೊಂಡು ರಸ್ತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ದಕ್ಷಿಣ ವಲಯದ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆಯ ವೇಳೆ ಮಾತನಾಡಿದ ಅವರು, ಬಿಟಿಎಂ ಲೇಔಟ್ ಲಿಂಕ್ ರಸ್ತೆಯನ್ನು ಅಭಿವೃದ್ಧಿ ಪಡಿಸುವುದರಿಂದ ಈ ಭಾಗದಲ್ಲಾಗುವ ಬಹುತೇಕ ಸಂಚಾರ ದಟ್ಟಣೆ ನಿವಾರಣೆಯಾಗಲಿದೆ. ಈ ಸಂಬಂಧ ಭೂಸ್ವಾಧೀನ ಪ್ರಕ್ರಿಯೆಯನ್ನು ಭೂಸ್ವಾಧೀನ ಕಾಯ್ದೆಯ ಅನುಸಾರ ಅವಶ್ಯಕ ಜಾಗವನ್ನು ವಶಪಡಿಸಿಕೊಂಡು ರಸ್ತೆ ಅಭಿವೃದ್ಧಿ ಕಾರ್ಯವನ್ನು ಪ್ರಾರಂಭಿಸಲು ಸೂಚನೆ ನೀಡಿದರು.
ಕೆ.ಎ.ಎಸ್ ಲೇಔಟ್ ಬಳಿ ಮಳೆ ನೀರುಗಾಲುವೆಯ ಸಂಪರ್ಕ ಕಡಿತಗೊಂಡಿದ್ದು, ಕೆ.ಎ.ಎಸ್ ಲೇಔಟ್ ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಖಾಸಗಿ ಸ್ಥಳದಲ್ಲಿ ಮಳೆ ನೀರುಗಾಲುವೆ ಹಾದುಹೋಗಲಿದೆ. ಈ ಸಂಬಂಧ ಖಾಸಗಿ ಸ್ಥಳದಲ್ಲಿ ನೀರುಗಾಲುವೆ ನಿರ್ಮಾಣ ಮಾಡಲು ಅನುಮತಿ ನೀಡದೇ ಇರುವುದನ್ನು ಗಮನಿಸಿ ಕಂದಾಯ ಇಲಾಖೆಯ ದಾಖಲೆಗಳ ಪ್ರಕಾರ ನಾಲ(ಮಳೆ ನೀರುಗಾಲುವೆ) ಇರುವ ಜಾಗವನ್ನು ಗುರುತಿಸಿ ಮಳೆ ನೀರುಗಾಲುವೆಯನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಜಯನಗರ ಕಾಂಪ್ಲೆಕ್ಸ್ ಗೆ ಭೇಟಿ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು, ಕಾಂಪ್ಲೆಕ್ಸ್ ನ 3 ಮತ್ತು 4ನೇ ಬ್ಲಾಕ್ ಕಾಮಗಾರಿಯು ಬಾಕಿಯಿದ್ದು, ಆರ್ಬಿಟ್ರೇಷನ್ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಈ ಪೈಕಿ ಅಂತಿಮ ತೀರ್ಪು ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಜಯನಗರದ ಕಾಂಪ್ಲೆಕ್ಸ್ ಸುತ್ತಮುತ್ತಲಿನ ಪ್ರದೇಶ ಪರಿಶೀಲನೆ ನಡೆಸಿ ಪಾದಚಾರಿ ಮಾರ್ಗಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಮಾಜಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ, ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ಬಿ.ಟಿ.ಮೋಹನ್ ಕೃಷ್ಣ, ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ವಿಕಾಯಕ್ ಸುಗೂರ್ ಹಾಗೂ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.