ಬೆಂಗಳೂರು: ಇದೇ ಜ.30ರಿಂದ ಅಂದರೆ ನಾಳೆಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಜಗದೀಶ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘವು ಎಲ್ಲ ನೌಕರರ ಸಂಘಟನೆಗಳ ಜತೆಗೂಡಿ ನಾಳೆಯಿಂದ ಅನಿರ್ದಿಷ್ಟಾವಧಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾಗಿ ಕಳೆದ ವಾರವೇ ಘೋಷಿಸಿತ್ತು.
ಆದರೆ ಫ್ರೀಡಂಪಾರ್ಕ್‌ನಲ್ಲಿ ವಿವಿಧ ಇಲಾಖೆಗಳ ಬೇರೆಬೇರೆ ನೌಕರರು ಪ್ರತಿಭಟನಾ ಧರಣಿ ನಡೆಸುತ್ತಿರುವುದರಿಂದ ಸ್ಥಳವಕಾಶದ ಲಭ್ಯತೆ ಇಲ್ಲದ ಕಾರಣ ಜ.30ರ ಬದಲಿಗೆ ಫೆ.6ರಿಂದ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ಈ ಧರಣಿ ಸತ್ಯಾಗ್ರಹ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಇಟ್ಟುಕೊಂಡು ಮಾಡುತ್ತಿರುವ ಈ ಧರಣಿ ಸತ್ಯಾಗ್ರಹದಲ್ಲಿ ಸಾರಿಗೆ ನೌಕರರ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಸರ್ಕಾರವನ್ನು ಎಚ್ಚರಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.