ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಮುಂದಿನ ಎರಡು ವಾರ ಮಹತ್ವದ ಅವಧಿಯಾಗಿರುವುದರಿಂದ ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿತುವ ಸಿದ್ಧತೆಗಳು ಕುರಿತು ಶನಿವಾರ) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಅಂತಾರಾಜ್ಯ ಜನರ ಸಂಚಾರದ ಮೇಲೆ ನಿಗಾ ವಹಿಸಲು ರಾಜ್ಯ ಪ್ರವೇಶಿಸುವ ರಸ್ತೆಗಳಲ್ಲಿ ಚುನಾವಣಾ ಚೆಕ್ ಪೋಸ್ಟ್ ಮಾದರಿಯಲ್ಲಿ ನಿಗಾ ಮತ್ತು ಆರೋಗ್ಯ ತಪಾಸಣಾ ತಂಡ ನಿಯೋಜಿಸಲು ಸಲಹೆ ನೀಡಿದರು.
ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ನೆರೆಯ ರಾಜ್ಯದ ಜನಸಂಚಾರ ಸಂಪೂರ್ಣ ಬಂದ್ ಮಾಡುವ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.
ಸಾಮೂಹಿಕ ಪ್ರಾರ್ಥನೆ ಬದಲು ತಮ್ಮ ತಮ್ಮ ಮನೆಗಳಲ್ಲಿಯೇ ಜನರು ಪ್ರಾರ್ಥನೆ ಕೈಗೊಳ್ಳಲು ಮನವೊಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಸಚಿವರು ಮಾಹಿತಿಯನ್ನು ಪಡೆದುಕೊಂಡರು.