ಮುಂಬೈ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ ಬಂದಿದ್ದ 11 ಮಂದಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟ ಘಟನೆ ನವಿ ಮುಂಬೈನಲ್ಲಿ ನಡೆದಿದೆ.
ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ನವಿ ಮುಂಬೈನಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಈ ಅವಘಡ ಸಂಭವಿಸಿದ್ದು, ಮೃತರ ಕುಟುಂಬಕ್ಕ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಣೆ ಮಾಡಿದ್ದಾರೆ.
ಇನ್ನು ಈ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕೂಡ ಆಗಮಿಸಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭ ವೀಕ್ಷಿಸಲು ಸಹಸ್ರಾರು ಜನರು ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಆಡಿಯೋ ಹಾಗೂ ವೀಡಿಯೋ ವ್ಯವಸ್ಥೆಯನ್ನು ಮಾಡಲಾಗಿತ್ತು.
ಆದರೆ ಪ್ರೇಕ್ಷಕರಿಗೆ ಯಾವುದೇ ರೀತಿಯ ಆಸನ ವ್ಯವಸ್ಥೆಯಾಗಲಿ ಮತ್ತು ಶೆಡ್‍ಗಳ ವ್ಯವಸ್ಥೆಯಾಗಲಿ ಮಾಡಿರಲಿಲ್ಲ. ಇವೆಲ್ಲದರ ಮಧ್ಯೆ ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಈ ಬಿಸಿಲಿನ ಝಳ ತಾಳಲಾರದೇ ಕಾರ್ಯಕ್ರಮದಲ್ಲಿ ನೆರೆದಿದ್ದ 11 ಮಂದಿ ಮೃತಪಟ್ಟು, 50 ಮಂದಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ತೆರಳಿದ್ದು, ರೋಗಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಘಟನೆ ಬಗ್ಗೆ ಮಾತನಾಡಿ, ಇದು ದುರದೃಷ್ಟಕರವಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು.