ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ ಮಾರ್ಗಸೂಚಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಯೋಜನೆಯ ಅಡಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಜೂನ್ 11 ರಿಂದ ಅವಕಾಶ ಕಲ್ಪಿಸಲಾಗುತ್ತಿದೆ.
ಈ ಮೂಲಕ ಶಕ್ತಿ ಯೋಜನೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ. ಯೋಜನೆಯಡಿ ವಿದ್ಯಾಧ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.
ಮಹಿಳಾ ಪ್ರಯಾಣಿಕರ ಪೈಕಿ 6 ರಿಂದ 12 ವರ್ಷದವರೆಗಿನ ಬಾಲಕಿಯರು, ಲಿಂಗತ್ವ ಅಲ್ಪ ಸಂಖ್ಯಾತರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ಐಷಾರಾಮಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ ಎಂದು 10 ಪುಟಗಳ ಮಾರ್ಗಸೂಚಿಯಲ್ಲಿ ಸಮಗ್ರವಾಗಿ ಉಲ್ಲೇಖಿಸಲಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕೂ ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ.
ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (KKRTC) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ನಗರ, ಸಾಮಾನ್ಯ ಹಾಗೂ ವೇಗದೂತ (ಐ/65) ಬಸ್‌ಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ತಿಳಿಸಿತ್ತು. ಆದರಂತೆ ಸೌಲಭ್ಯ ಕಲ್ಪಿಸಿದೆ.
ಮಾರ್ಗಸೂಚಿಯಲ್ಲಿ ಏನೇನಿದೆ? 1) ಸರ್ಕಾರಿ ಬಸ್‌ಗಳಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ. 2) ಸ್ಮಾರ್ಟ್ಕಾರ್ಡ್ ಪಡೆಯುವವರೆಗೆ ಗುರುತಿನ ಚೀಟಿ ತೋರಿಸಿ ಪ್ರಯಾಣ.
3) ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ತೋರಿಸಿ ಪ್ರಯಾಣಿಸಬಹುದು. 4) ಸರ್ಕಾರದ ಅಂಗವಿಕಲರ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ ಕೂಡ ತೋರಿಸಿ ಪ್ರಯಾಣಿಸಬಹುದು.
5) ರಾಜಹಂಸ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್, ಐರಾವತ, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಫ್ಲೈಬಸ್ಗಳಲ್ಲಿ ಉಚಿತ ಪ್ರಯಾಣ ಅನ್ವಯಿಸಲ್ಲ. 6) ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ದೂರದ ಯಾವುದೇ ಮಿತಿಯಿಲ್ಲ.
7) ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ. 8) ಅಂತಾರಾಜ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. 9) ನಿಗದಿಗಿಂತ ಹೆಚ್ಚಿನ ಪ್ರಮಾಣದ ಲಗೇಜ್ ತಂದರೆ ಟಿಕೆಟ್ ಪಡೆಯಬೇಕು. 10) ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ ಶಕ್ತಿ ಸ್ಮಾರ್ಟ್ಕಾರ್ಡ್ ಪಡೆಯಬೇಕು.
ಇನ್ನು ಇದಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ ಈ ಕೆಳಗೆ ನೀಡಲಾಗಿರುವ PDF ಲಿಂಕ್ ನೋಡಬಹುದು.. GSO-818 Shakti yojane