ಬೆಂಗಳೂರು: ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ ಸಂಖ್ಯೆ 0824-244259ನ್ನು ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಉಡುಪಿಯಲ್ಲೂ ರಜೆ ಘೋಷಣೆ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು, ಪಿಯು ಕಾಲೇಜಿಗೆ ಇಂದು ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಘೋಷಣೆ: ಹಾಗೆಯೇ ಜುಲೈ 5 ರಂದು ಭಾರೀ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಮಾಹಿತಿ ನೀಡಿದ್ದು, ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತವಾಗಿ ಜುಲೈ 5, 2023ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಪ್ರದೇಶದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಮಳೆಯಿಂದಾಗಿ ಕಾರವಾರದ ಹಬ್ಬುವಾಡದಲ್ಲಿರುವ ಸರ್ಕಾರಿ ಸಾರಿಗೆ ಬಸ್ ನಿಲ್ದಾಣ, ಘಟಕದ ಕಚೇರಿಯೊಳಗೆ ಮಳೆ ನೀರು ನುಗ್ಗಿದ್ದು, ಡಿಪೋ ಕಚೇರಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಅಲ್ಲದೆ ದಾಖಲೆಗಳು ನೀರು ಪಾಲಾಗಿವೆ. ಮಳೆಗೆ ಕಾರವಾರ, ಭಟ್ಕಳ ನಗರ ರಸ್ತೆಗಳು ಜಲಾವೃತಗೊಂಡಿವೆ. ಹೆಚ್ಚಿನ ಮಳೆಯಾದಲ್ಲಿ ಸೋನಾರವಾಡ, ಎಲ್‌ಐಸಿ ಕಾಲೋನಿ, ಗುನಿಗಿ ವಾಡದ ಮನೆಗಳಿಗೂ ನೀರು ತುಂಬುವ ಆತಂಕ ಎದುರಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.