ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ 5.19 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅನಧಿಕೃತವಾಗಿ ಪ್ರಯಾಣ ಮಾಡುವುದು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಜೂನ್-2023 ರ ಮಾಹೆಯಲ್ಲಿ ಒಟ್ಟು 13,196 ಟ್ರಿಪ್ ಗಳನ್ನು ತಪಾಸಿಸಿ, 2,627 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು 5,19,060 ರೂ.ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ದ 1005 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 328 ಪುರುಷ ಪ್ರಯಾಣಿಕರಿಂದ ಒಟ್ಟು 32,800 ರೂ. ದಂಡ ವಿಧಿಸಲಾಗಿದೆ.
ಒಟ್ಟಾರೆ ಜೂನ್ ತಿಂಗಳಿನಲ್ಲಿ 2,627 ಪ್ರಯಾಣಿಕರಿಂದ ಒಟ್ಟು 5,19,060 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಖು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದು. ಜತೆಗೆ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಸಂಸ್ಥೆ ಅಧಿಕಾರಿಗಳು ಮನವಿ ಮಾಡಿದ್ದಾರೆ.