
ಬೆಂಗಳೂರು: ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 5ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾತಿಯಿ ಸಭಾಂಗಣದಲ್ಲಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಒಳಮೀಸಲಾತಿ ಸಮೀಕ್ಷೆಯು ಮೇ 5 ರಿಂದ ಪ್ರಾರಂಭವಾಗಲಿದೆ. ಸಮೀಕ್ಷೆ ನಡೆಸಲು ಸರ್ಕಾರದಿಂದ ಅಪ್ಲಿಕೇಶನ್ ಸಿದ್ದಪಡಿಸಲಾಗಿದ್ದು, ಸಮೀಕ್ಷೆಯಲ್ಲಿ ಬರುವ ತಾಂತ್ರಿಕ ತೊಂದರೆ ಹಾಗೂ ಅದಕ್ಕೆ ಪೂರಕ ಪರಿಹಾರವನ್ನು ಪಡೆದುಕೊಳ್ಳಬೇಕು. ಈ ವೇಳೆ ದತ್ತಾಂಶ ಸಂಗ್ರಹದಲ್ಲಿ ಲೋಪವಾಗದಂತೆ ಸರಿಯಾದ ಕ್ರಮದಲ್ಲಿ ಸಮೀಕ್ಷೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ತರಬೇತಿಯಲ್ಲಿ ಅಪ್ಲೀಕೇಶನ್ ನಿರ್ವಹಣೆ, ಹೇಗೆ ದತ್ತಾಂಶ ಸಂಗ್ರಹಿಸಿ ನಮೂದಿಸಬೇಕು ಎಂಬ ಸಂಪೂರ್ಣ ಮಾಹಿತಿ ಇದೆ. ದತ್ತಾಂಶದಲ್ಲಿ ಏರುಪೇರಾದರೇ ಸರ್ಕಾರದಿಂದ ಸಿಗುವ ರಾಜಕೀಯ, ಶಿಕ್ಷಣ, ಉದ್ಯೋಗ, ಸೇರಿದಂತೆ ಎಲ್ಲ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹಾಗಾಗಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ದತ್ತಾಂಶ ಸರಿಯಾದ ಕ್ರಮದಲ್ಲಿ ಸಂಗ್ರಹಿಸಿ. ಸುಭದ್ರ ಪ್ರಜಾಪ್ರಭುತ್ವಕ್ಕೆ ನೀವೆಲ್ಲರು ನೀಡುವ ದತ್ತಾಂಶ ಮುಖ್ಯವಾಗಿದೆ ಎಂದರು.
ಸಮೀಕ್ಷೆಯ ವಿಧಾನ ಮತ್ತು ವೇಳಾಪಟ್ಟಿ: ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗುವುದು. ಮೊದಲ ಹಂತದಲ್ಲಿ ಮೇ 5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಎರಡನೇ ಹಂತದಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವರು. ಮೂರನೇ ಹಂತದಲ್ಲಿ ಮೇ 19 ರಿಂದ 23 ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಬಹುದಾಗಿದೆ.
ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬೈಲಾಂಜಿನಪ್ಪ, ದತ್ತಾಂಶ ಸಂಗ್ರಹ ಜಿಲ್ಲಾ, ತಾಲೂಕು ಮಟ್ಟದ ಮಾಸ್ಟರ್ ಟ್ರೇನರ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
