NEWSನಮ್ಮಜಿಲ್ಲೆನಮ್ಮರಾಜ್ಯ

ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನ ಮಾಣಿಕ್​ಷಾ ಪರೇಡ್​ ಮೈದಾನದಲ್ಲಿ ತ್ರಿವಣ ಧ್ವಜಾರೋಹಣ ಮಾಡುವ ಮೂಲಕ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.

ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿ ಸೇನೆ, ಪ್ಯಾರಾ ಮಿಲಿಟರಿ ಪಡೆಗಳು, ಅಗ್ನಿಶಾಮಕ ದಳ, ಸೇವಾ ದಳ, ರಾಜ್ಯ ಮೀಸಲು ಪೊಲೀಸ್ ಪಡೆಗಳು, ಎನ್​ಸಿಸಿ, ಆರ್ಮಿ ಸ್ಕೂಲ್​, ವಿದ್ಯಾರ್ಥಿಗಳು ಪರೇಡ್​ ನಡೆಸಿದರು. ಸರ್ಕಾರಿ ಶಾಲಾ ವಿದ್ಯಾರ್ಥಿಗಳು ನೃತ್ಯದ ಮೂಲಕ ಜನಮನ ಸೆಳೆಯುತ್ತಿದ್ದಾರೆ.

ಇದರ ಜತೆಗೆ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಧ್ವಜಾರೋಹಣದ ಬಳಿಕ ತರೆದ ಜೀಪ್​ನಲ್ಲಿ ಪರೇಡ್ ವೀಕ್ಷಿಸಿದರು. ಬಳಿಕ ಮಾತನಾಡಿ ಸಿಎಂ, ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು.

ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಸರ್ಕಾರ ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾರಂಭಿಸಿ ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ.

ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ. ಇದುವರೆಗೆ
38.54 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಎರಡನೇ ಗ್ಯಾರಂಟಿ ಯೋಜನೆ, 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ. ಈ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್‍ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ನಾವು ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸುತ್ತಿದ್ದೇವೆ.

ಹಸಿವು ಮುಕ್ತ ಕರ್ನಾಟಕದ ಕಲ್ಪನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಜಾರಿಗೊಳಿಸಿರುವ ಮತ್ತೊಂದು ಗ್ಯಾರಂಟಿ ಯೋಜನೆ ‘ಅನ್ನ ಭಾಗ್ಯʼ. ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ.

ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಲ್ಲವು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ದಿನಾಂಕ ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ.

ಪದವಿ, ಡಿಪ್ಲೊಮಾ ಪಡೆದ ಯುವಕರಿಗೆ ಕೂಡಲೇ ಉದ್ಯೋಗ ದೊರೆಯದಿದ್ದರೆ, ನಿರಾಶರಾಗದಂತೆ, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ, ಬೆಂಬಲ ನೀಡುವ ಯೋಜನೆ ಯುವನಿಧಿ. ಶಿಕ್ಷಣ ಪಡೆದು ಆರು ತಿಂಗಳಾದರೂ ಉದ್ಯೋಗ ದೊರೆಯದ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಠ ಎರಡು ವರ್ಷದವರೆಗೆ, ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. 2022-23ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಈ ಯೋಜನೆ ಜಾರಿಯಾಗಲಿದೆ.

ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಬರಲಿದೆ. ಜಾತಿ, ಮತ, ವರ್ಗ, ವರ್ಣ ಭೇದವಿಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.

ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ.

ಈ ಕೋಟಿ, ಕೋಟಿ ಜನರಿಗೆ ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ. ಮತ್ತು ಸಮಗ್ರ ಮಹಿಳಾ ಸಶಕ್ತೀಕರಣ ಸಾಧ್ಯವಾಗಲಿದೆ. ಇದರಿಂದ ಕರ್ನಾಟಕ ಮಾದರಿ ಅಭಿವೃದ್ಧಿ ವ್ಯಾಖ್ಯಾನವು ಪ್ರಾರಂಭವಾಗಲಿದೆ. ನಮ್ಮ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಸಂಪನ್ಮೂಲಗಳನ್ನು ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸಲು ಬದ್ಧವಾಗಿದೆ. ಸರ್ಕಾರದ ಆದಾಯಗಳ ಸಂಗ್ರಹವು ಸಹ ಶಕ್ತಿಯುತವಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು