ಚಾಮರಾಜನಗರ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಪ್ರವಾಸ ಕೈಗೊಂಡು ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು.
ಬೆಳಿಗ್ಗೆ ಪುಣಜನೂರು ಪೊಲೀಸ್ ಚೆಕ್ ಪೋಸ್ಟ್ ಹಾಗೂ ಆರ್‌ಟಿಒ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರ್‌ಟಿಒ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಗೆ ಹೊಂದಿಕೊಂಡಿರುವ ರಾಜ್ಯ ಮತ್ತು ತಮಿಳುನಾಡು ಗಡಿ ಭಾಗದಲ್ಲಿ ವಾಹನಗಳ ಸುರಕ್ಷಿತ ಸಂಚಾರದ ಬಗ್ಗೆ ಖಾತರಿಪಡಿಸಬೇಕು ಎಂಬುದರ ಜತೆಗೆ ಅಗತ್ಯ ನಿರ್ದೇಶನ ನೀಡಿದರು.
ಬಳಿಕ ಚಾಮರಾಜನಗರ ತಾಲೂಕಿನ ಬಿಸಲವಾಡಿ ಚೆಕ್ ಪೋಸ್ಟ್, ಮೂಡ್ಲಹೊಸಹಳ್ಳಿ, ಯತ್ತಿಕಟ್ಟೆಬೆಟ್ಟಗೆ ಭೇಟಿ ನೀಡಿ ಗಡಿಭಾಗದಲ್ಲಿ ವಾಹನಗಳ ಸುರಕ್ಷಿತ ಸಂಚಾರದ ಪರಿಸ್ಥಿತಿಗಳನ್ನು ಅವಲೋಕಿಸಿ, ಅಧಿಕಾರಿಗಳಿಗೆ ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.
ಬಿಸಲವಾಡಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೂ ಭೇಟಿ ನೀಡಿ ವಿದ್ಯಾರ್ಥಿಗಳು ಸೇವಿಸುವ ಆಹಾರ ಗುಣಮಟ್ಟ, ವಿದ್ಯಾರ್ಥಿನಿಲಯದ ವ್ಯವಸ್ಥೆಗಳನ್ನು ಕೂಡ ಪರಿಶೀಲೀಸಿದರು. ಈ ವೇಳೆ ಮಕ್ಕಳೊಂದಿಗೆ ಸಂವಾದ ನಡೆಸಿದರು.