ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಉಂಟಾಗಿರುವ ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು ( CWMA) ನೀಡಿರುವ ಆದೇಶದ ವಿರುದ್ಧ ಪುನಃ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ರಿವಿಶನ್ ಪಿಟಿಷನ್ ಹಾಕಲು ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ನಾಳೆಯೇ (ಶನಿವಾರ) ಸುಪ್ರೀಂ ಕೋರ್ಟ್ ಮತ್ತು ಪ್ರಾಧಿಕಾರದ ಮುಂದೆ ರಿವಿಶನ್ ಪಿಟಿಷನ್ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಮತ್ತೆ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲುCWMA ಆದೇಶಿಸಿರುವುದರಿಂದ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್‌ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.
ಆ ಬಳಿಕ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಜತೆ ಮಾತುಕತೆ ನಡೆಸಲಾಗಿದೆ. ನಮ್ಮ ಆಹ್ವಾನದ ಮೇರೆಗೆ ಅವರು ಸಭೆಯಲ್ಲಿ ಭಾಗವಹಿಸಿದ್ದರು. ನಮಗೆ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ. ಇತಿಹಾಸ ಪುಟಕ್ಕೆ ಹೋಗುವ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ಹಲವು ಹಿರಿಯ ನ್ಯಾಯಮೂರ್ತಿಗಳು, ನ್ಯಾಯವಾದಿಗಳು ಸಭೆಯಲ್ಲಿ ಸಾಕಷ್ಟು ಚರ್ಚೆ ಮಾಡಿದ್ದಾರೆ. ಈ ವೇಳೆ ಮಹದಾಯಿ, ಕಾವೇರಿ ಸೇರಿದಂತೆ ಜನರ ಸಮಸ್ಯೆಗಳನ್ನು ಅಡ್ವೈಸ್ ಮಾಡಲು ಸಮಿತಿ ರಚಿಸುವಂತೆ ಸಲಹೆ ನೀಡಿದ್ದಾರೆ. ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ ಸೂಚನೆ ಕೊಡಲು ಆ ಸಮಿತಿ ಕಾರ್ಯನಿರ್ವಹಣೆ ಮಾಡಲಿದೆ ಎಂದ ಅವರು ಸಮಿತಿ ರಚನೆಎಎ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈಗ 3000 ಸಾವಿರ ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ಆದೇಶ ಮಾಡಿದೆ. ಎರಡು ಕಮಿಟಿಗಳ ಮುಂದೆ ನೀರಿಲ್ಲ ಎಂದು ವಾದ ಮಾಡಿದ್ದೆವು. ಆದರೂ ಹಳೆಯ ಆದೇಶವನ್ನು ಪಾಲನೆ ಮಾಡಿ ಎಂದು ಆದೇಶ ಮಾಡಿದೆ. ಹೀಗಾಗಿ ಕಾನೂನು ತಜ್ಞರು ರಿವಿಶನ್ ಪಿಟಿಷನ್ ಹಾಕಲು ಸಲಹೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಸುಪ್ರೀಂಗೆ ಮೇಕೆದಾಟು ಯೋಜನೆ ಬಗ್ಗೆ ಮನವರಿಕೆ ಮಾಡಿ: ಇದರ ಜತೆಗೆ ಮೇಕೆದಾಟು ಯೋಜನೆ ಬಗ್ಗೆಯೂ ಪ್ರಸ್ತಾಪ ಮಾಡಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಇದರ ಅಗತ್ಯತೆ ಬಗ್ಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಸಮಸ್ಯೆ ಆಗುವುದಿಲ್ಲ. ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಇದೊಂದು ಆದರೆ, ಕರ್ನಾಟಕದ ಜಲ ಸಮಸ್ಯೆಯೂ ಬಗೆಹರಿಯುತ್ತದೆ ಎಂಬ ವಿಚಾರವನ್ನು ಸುಪ್ರೀಂ ಕೋರ್ಟ್‌ಗೆ ಮನದಟ್ಟಾಗುವಂತೆ ವಾದ ಮಂಡಿಸಲು ಸಲಹೆ ನೀಡಿದ್ದಾರೆಂದು ಸಿಎಂ ತಿಳಿಸಿದರು.
ಕಳೆದ ಬಾರಿ 650 ಟಿಎಂಸಿ ನೀರು ತಮಿಳುನಾಡಿಗೆ ಹೋಗಿದೆ. ಅವರು ಪರ್ಯಾಯ ಜಲಾಶಯ ಇಲ್ಲವೇ ಅಣೆಕಟ್ಟನ್ನು ಇಟ್ಟುಕೊಳ್ಳಬಹುದು. ಮಳೆ ಬಾರದ ವರ್ಷದಲ್ಲಿ ಅದನ್ನು ಉಪಯೋಗಿಸಿಕೊಳ್ಳಬಹುದು ಎಂಬ ಸಲಹೆಯನ್ನೂ ಕಾನೂನು ತಜ್ಞರು ನೀಡಿದ್ದಾರೆ. ಆ ನಿಟ್ಟಿನಲ್ಲಿಯೂ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.