NEWSನಮ್ಮರಾಜ್ಯರಾಜಕೀಯ

ಸರ್ಕಾರಿ ನೌಕರರ 7ನೇ ವೇತನ ಆಯೋಗ ವರದಿ ಇನ್ನೂ 6 ತಿಂಗಳು ವಿಳಂಬ..!!?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರ ರಚನೆ ಮಾಡಿರುವ 7ನೇ ರಾಜ್ಯ ವೇತನ ಆಯೋಗವು ಸರ್ಕಾರಕ್ಕೆ ಯಾವಾಗ ವರದಿ ನೀಡಲಿದೆ ಎಂದು ಸರ್ಕಾರಿ ನೌಕರರು ಕಾಯುತ್ತಿದ್ದಾರೆ. ನವೆಂಬರ್‌ನಲ್ಲಿ ಸರ್ಕಾರಕ್ಕೆ ಆಯೋಗ ವರದಿ ಸಲ್ಲಿಸುವ ನಿರೀಕ್ಷೆ ಇದೆ. ಇದರ ನಡುವೆಯೇ ಆಯೋಗದ ಅವಧಿಯನ್ನು ಇನ್ನೂ ಆರು ತಿಂಗಳು ವಿಸ್ತರಣೆ ಮಾಡಲಾಗುತ್ತದೆ ಎಂಬ ಸುದ್ದಿಯೂ ಹಬ್ಬಿದೆ.

ಈ ನಡುವೆ ಆಯೋಗ ತನ್ನ ಪರಿಶೀಲನಾ ಅಂಶಗಳನ್ನು ಈಗಾಗಲೇ ಪೂರ್ಣಗೊಳಿಸಿದೆ ಎಂಬ ಮಾಹಿತಿಯೂ ಇದೆ. ಬಿಜೆಪಿ ಸರ್ಕಾರ ಮೊದಲು ಆಯೋಗ ರಚನೆ ಮಾಡಿದಾಗಲೇ ಆರು ತಿಂಗಳಿನಲ್ಲಿ ವರದಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಿತ್ತು. ಆದರೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಾದ ಕಾರಣ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿಲ್ಲ.

ಆದರೆ, ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಲಾಗಿದ್ದು, ಇವರು ಕಳೆದ ವಾರ 7ನೇ ರಾಜ್ಯ ವೇತನ ಆಯೋಗದ ಸದಸ್ಯರ ಜತೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದರು.

ಈ ವೇಳೆ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು, ನವೆಂಬರ್‌ನಲ್ಲಿ ಆಯೋಗ ವರದಿ ಸಲ್ಲಿಕೆ ಮಾಡಬಹುದು ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಇನ್ನೂ ಆರು ತಿಂಗಳು ವಿಸ್ತರಣೆ ಮಾಡಲಾಗುತ್ತದೆ ಎಂಬ ಸುದ್ದಿಯೂ ಹಬ್ಬಿರುವುದು ಈಗ ನೌಕರರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ.

ಮೊದಲು ಬಿಜೆಪಿ ಸರ್ಕಾರ ದಿನಾಂಕ 19/11/2022ರಂದು 7ನೇ ರಾಜ್ಯ ವೇತನ ಆಯೋಗವನ್ನು ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚನೆ ಮಾಡಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಯೋಗ ವರದಿ ನೀಡಲು ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/2023ರಿಂದ ಮತ್ತೆ 6 ತಿಂಗಳು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿತ್ತು.

ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪ್ರಯತ್ನ ನಡೆಸಿದೆ. ಇಂತಹ ಸಂದರ್ಭದಲ್ಲಿ 7ನೇ ರಾಜ್ಯ ವೇತನ ಆಯೋಗವು ವರದಿ ನೀಡಿದರೆ ಅದನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಬೇಕು. ಆದ್ದರಿಂದ ಅಯೋಗದ ವರದಿಯನ್ನು ವಿಸ್ತರಣೆ ಮಾಡಿ, 2024ರಲ್ಲಿ ವರದಿ ಸ್ವೀಕರಿಸುವಂತೆ ಮಾಡಲಾಗುತ್ತದೆ ಎಂಬುದು ಲೆಕ್ಕಾಚಾರವಾಗಿದೆ.

ಆಯೋಗ ಸರ್ಕಾರಕ್ಕೆ ತನ್ನ ಶಿಫಾರಸು ನೀಡುವ ಮೊದಲು ಮುಖ್ಯಮಂತ್ರಿಗಳು ಮತ್ತು ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದೆ. ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಬೇಕಾದರೆ ಅಗತ್ಯವಿರುವ ಅನುದಾನ ಎಷ್ಟು ಎಂದು ಚರ್ಚೆ ನಡೆದಿದೆ. ಆದ್ದರಿಂದ ಆಯೋಗದ ಅವಧಿಯನ್ನು ಇನ್ನೂ 6 ತಿಂಗಳು ವಿಸ್ತರಣೆ ಮಾಡಲಾಗುತ್ತದೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ.

7ನೇ ರಾಜ್ಯ ವೇತನ ಆಯೋಗ  ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳಿಗೆ ಮರಣ ಹಾಗೂ ನಿವೃತ್ತಿ ಉಪದಾನ ಸೌಲಭ್ಯಗಳನ್ನೊಳಗೊಂಡಂತೆ ಲಭ್ಯವಿರುವ ಎಲ್ಲ ಕ್ರೋಢೀಕೃತ ಸೌಲಭ್ಯಗಳನ್ನು ಗಣನೆಗೆ ತೆಗೆದುಕೊಂಡು, ಈ ಸಿಬ್ಬಂದಿಗಳ ಪ್ರಸ್ತುತ ವೇತನ ರಚನೆಯನ್ನು ಪರಿಶೀಲಿಸುವುದು ಹಾಗೂ ಅಪೇಕ್ಷಣೀಯವಾದ, ಕಾರ್ಯಸಾಧ್ಯವಿರುವ ನೂತನ ವೇತನ ರಚನೆಯನ್ನು ರೂಪಿಸಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವೃಂದದ ಹುದ್ದೆಗಳನ್ನು ಸಮೀಕರಿಸಿ ಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಿ ವರದಿ ನೀಡಲಿದೆ. ರಾಜ್ಯ ಸರ್ಕಾರವು ಅಳವಡಿಸಿಕೊಳ್ಳಬಹುದಾದ ತುಟ್ಟಿಭತ್ಯೆಯ ಸೂತ್ರ, ಮನೆ ಬಾಡಿಗೆ ಭತ್ಯೆ ಮತ್ತು ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆಗಳು ಇತ್ಯಾದಿ ಮತ್ತು ರಜೆ ಪ್ರಯಾಣ ರಿಯಾಯಿತಿ ಮತ್ತು ವೈದ್ಯಕೀಯ ಮರುಪಾವತಿ ಸೌಲಭ್ಯಗಳನ್ನೊಳಗೊಂಡಂತ ವಿವಿಧ ಭತ್ಯೆಗಳ ಪರಿಶೀಲಿಸಲಿದೆ.

ಆಯೋಗವು ತನ್ನ ಶಿಫಾರಸ್ಸುಗಳನ್ನು ಮಾಡುವಲ್ಲಿ, ರಾಜ್ಯ ಸಂಪನ್ಮೂಲಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತಾಗಿ ರಾಜ್ಯ ಸರ್ಕಾರದ ಹೊಣೆಗಳು, ಶಾಸನಬದ್ಧ ಹಾಗೂ ಕ್ರಮಬದ್ಧ ಕಾರ್ಯಗಳು, ಋಣಸೇವಾ ನಿರ್ವಹಣೆಗಳು ಮತ್ತು ಇತರೆ ಅಭಿವೃದ್ಧಿಯೇತರ ಅಗತ್ಯಗಳನ್ನು ಹಾಗೂ ವಿತ್ತೀಯ ಹೊಣೆಗಾರಿಕೆ ನಿರ್ವಹಣೆ ಅಧಿನಿಯಮ, 2002ರ ಅಧ್ಯಾದೇಶದ ಅವಕಾಶಗಳ ಪರಿಮಿತಿಯನ್ನು ಗಮನದಲ್ಲಿರಿಸಿಕೊಳ್ಳಬೇಕಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು