ಮೈಸೂರು: ವಿವಾದಕ್ಕೆ ಕಾರಣವಾಗಿದ್ದ ಮಹಿಷಾ ದಸರಾ ಮತ್ತು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದು, ಇದರಿಂದ ಎರಡು ಕಾರ್ಯಕ್ರಮಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಕುರಿತಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದ್ದು, ಚಾಮುಂಡಿ ಬೆಟ್ಟ ಚಲೋ ಜಾಥಾಗೂ ಅನುಮತಿ ನೀಡಿಲ್ಲ. ಅ.13ರಂದು ಮಹಿಷಾ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9.30ಕ್ಕೆ ಮಹಿಷನ ಪ್ರತಿಮೆಗೆ ಮುಷ್ಪಾರ್ಚನೆ ಮಾಡಲು ತೀರ್ಮಾನಿಸಲಾಗಿತ್ತು.
ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯ ದ್ವಾರ ತಾವರೆಕಟ್ಟೆ ಬಳಿಯಿಂದ ಜಾಥಾ ನಡೆಸಿ, ಮೃಗಾಲಯದ ರಸ್ತೆ ಮೂಲಕ ಮೆರವಣಿಗೆ ಮಾಡಿ ಪುರಭವನದ ಅಂಬೇಡ್ಕರ್ ಮತ್ಥಳಿಗೆ ಮಾಲಾರ್ಪಣೆ ಮಾಡಲು ನಿರ್ಧರಿಸಲಾಗಿತ್ತು.
ಇನ್ನು ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಸಲು ಆಯೋಜನೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸ್ ಇಲಾಖೆ ಅನುಮತಿ ನೀಡುವಂತೆ ಮಹಿಷಾ ದಸರಾ ಆಚರಣಾ ಸಮಿತಿ ಮನವಿ ಮಾಡಿತ್ತು.
ಮಹಿಷ ದಸರಾ ಆಚರಣೆ ವಿರೋಧಿಸಿದ್ದ ಬಿಜೆಪಿ ಅ.13ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋಗೆ ಕರೆ ನೀಡಿತ್ತು. ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಇದೀಗ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಿಸಲಾಗಿದೆ. ಒಂದು ವೇಳೆ ಅನುಮತಿ ನೀಡಿದರೆ ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿರುವ ಕಾರಣ ಮಹಿಷ ದಸರಾ ಮತ್ತು ಚಾಮುಂಡಿ ಬೆಟ್ಟ ಚಲೋ ಎರಡಕ್ಕೂ ಬ್ರೇಕ್ ಹಾಕಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಎರಡೂ ಬಣಗಳಿಗೂ ಅನ್ವಯವಾಗುವಂತೆ ಪ್ರಕಟಣೆ ಹೊರಡಿಸಿದ್ದಾರೆ.