NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸಿಬ್ಬಂದಿಗಳಿಗೆ ಹತ್ತು ಮಾದರಿಯ ಹೃದಯ ಸಂಬಂಧಿ ತಪಾಸಣೆಗೆ ಒಡಂಬಡಿಕೆ

ವಿಜಯಪಥ ಸಮಗ್ರ ಸುದ್ದಿ
  • ಒಡಂಬಡಿಕೆ ಸಹಿ ಹಾಕಿದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶ ಡಾ.ಸಿ.ಎನ್. ಮಂಜುನಾಥ್‌- ಕೆಎಸ್‌ಆರ್‌ಟಿಸಿ ಎಂಡಿ ವಿ.ಅನ್ಬುಕುಮಾರ್‌
  • ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಯೋಜನೆಗೆ ಚಾಲನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಮಸ್ತ ಸಿಬ್ಬಂದಿಗಳಿಗೆ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ನಿಗಮವು ಇಂದು (ನವೆಂಬರ್‌ 2) ಒಡಂಬಡಿಕೆ ಮಾಡಿಕೊಂಡಿತು.

ಇಂದು ನಿಮಗದ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶರಾದ ಡಾ.ಸಿ.ಎನ್. ಮಂಜುನಾಥ್‌ ಹಾಗೂ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್‌ ಅವರು ಒಡಂಬಡಿಕೆ ಸಹಿ ಹಾಕುವ ಮೂಲಕ ಯೋಜನೆಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ನಿಗಮವು “ಆರೋಗ್ಯವಂತ ನೌಕರರೇ ಸಂಸ್ಥೆಯ ಆಸ್ತಿ” ಎಂದು ಪರಿಗಣಿಸಿದೆ. ನಿಗಮದಲ್ಲಿ ಒಟ್ಟು 34,000 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಆ ಪೈಕಿ 24,686 ಚಾಲಕ ಮತ್ತು ನಿರ್ವಾಹಕರಿದ್ದಾರೆ ಎಂದು ತಿಳಿಸಿದರು.

ಇನ್ನು ನಿಗಮದ ನೌಕರರ ಕಾರ್ಯಸ್ವರೂಪ, ಜೀವನಶೈಲಿ ಮತ್ತು ಇತರೆ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ/ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ತೀರಾ ಸಾಮಾನ್ಯವಾಗಿದೆ. ಅದರಲ್ಲೂ, 40 ವರ್ಷ ಮೇಲ್ಪಟ್ಟ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಸಂಬಂಧ, ನಿಗಮದ ಸಮಸ್ತ ಸಿಬ್ಬಂದಿಗಳನ್ನು ಹೃದಯ ಸಂಬಂಧಿಸಿದ ನಿರ್ದಿಷ್ಟವಾದ ಪರೀಕ್ಷೆ/ ತಪಾಸಣೆಗಳಿಗೆ ಒಳಪಡಿಸುವ ಅವಶ್ಯಕತೆ ಮನಗಂಡು, ನೌಕರರಲ್ಲಿ ಜಾಗೃತಿ/ ಅರಿವು ಮೂಡಿಸಿ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಅನುವಾಗುವ ಉದ್ದೇಶದಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಹೃದಯ ಸಂಬಂಧಿ ಹತ್ತು ಇತರೆ ವೈದ್ಯಕೀಯ ತಪಾಸಣೆಗಳನ್ನು ನೌಕರರಿಗೆ ಮಾಡಿಸಲು ತೀರ್ಮಾನಿಸಿ, ಮುಂದಿನ ಐದು ವರ್ಷಗಳ ಅವಧಿಯ ಒಡಂಬಡಿಕೆಯನ್ನು 02.11.2023 ರಂದು ಮಾಡಿಕೊಳ್ಳಲಾಯಿತು ಎಂದು ವಿವರಿಸಿದರು.

ಡಾ.ಸಿ.ಎನ್. ಮಂಜುನಾಥ್ ಮಾತನಾಡಿ, ಮನುಷ್ಯನ ಆರೋಗ್ಯ ಬಹಳ ಮುಖ್ಯವಾಗಿದ್ದು, ಅದನ್ನು ಬೆಲೆ ಕೊಟ್ಟು ಕೊಂಡುಕೊಳ್ಳಲಾಗದು. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಮಾಣ ಅತಿ ಹೆಚ್ಚಳವಾಗಿದ್ದು ಚಿಕ್ಕ ವಯಸ್ಸಿನವರಲ್ಲಿ ಇದು ಅಧಿಕವಾಗಿದೆ. ವಯಸ್ಸಾದ ತಂದೆ ತಾಯಿಗಳು ಮಕ್ಕಳನ್ನು ಆಸ್ಪತ್ರೆಗೆ ಕರೆತರುವ ಸ್ಥಿತಿ ಎದುರಾಗಿದೆ ಎಂದರು.

ಇನ್ನು ಮನುಷ್ಯನ ದೇಹವೇ ಅವನ ಪ್ರಮುಖ ಬಾಳ ಸಂಗಾತಿಯಾಗಿದ್ದು ಅದನ್ನು ಯಾವುದೇ ಕಾಯಿಲೆಗಳಿಂದ ರಕ್ಷಿಸಿಕೊಳ್ಳುವುದು ಅವರ ಪ್ರಮುಖ ಜವಾಬ್ದಾರಿ ಆಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಬಿಎಂಟಿಸಿಯಲ್ಲಿಯೂ ಈ ಯೋಜನೆಯಿದ್ದು, ಅಲ್ಲಿ 45 ವರುಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಈ ಯೋಜನೆ ಒಳಪಡಲಿದೆ. ಆದರೆ ಕೆಎಸ್‌ಆರ್‌ಟಿಸಿಯಲ್ಲಿ 40 ವರುಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಈ ಯೋಜನೆ ಅನುಷ್ಠಾನ ಮಾಡಿರುವುದು ಒಳ್ಳೆಯದು. ಏಕೆಂದರೆ ಈಗ 40 ರ ಆಸುಪಾಸಿನಲ್ಲಿಯೇ ಹೃದಯ ಸಂಬಂಧಿ ತೊಂದರೆಗಳು ಹೆಚ್ಚು ವರದಿಯಾಗುತ್ತಿವೆ ಎಂದು ಹೇಳಿದರು.

ನಿಗಮವು ನಮ್ಮ ಜಯದೇವ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಇನ್ನು ಮುಂದೆ ಸಿಬ್ಬಂದಿಗಳ ಹೃದಯ ಸಂಬಂಧಿ ಕಾಯಿಲೆಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಕೊಡುವ ಜವಾಬ್ದಾರಿ ನಮ್ಮ ಸಂಸ್ಥೆಯ ಮೇಲಿದೆ. ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ತಪಾಸಣೆ ಹಾಗೂ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ನಮ್ಮ ಸಂಸ್ಥೆಯ ಮೈಸೂರಿನ ಕೇಂದ್ರದಲ್ಲಿಯೂ ಸಹ ಅಲ್ಲಿಗೆ ಸಮೀಪವಿರುವ ವಿಭಾಗಗಳ ಸಿಬ್ಬಂದಿಗಳಿಗೆ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮಾತನಾಡಿ, ಈಗಾಗಲೇ ನಿಗಮದ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬದ ಹಿತ ದೃಷ್ಟಿಯಿಂದ ಹಲವು ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಮುಂದುವರಿದ ಭಾಗವಾಗಿ ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವುದರಿಂದ 40 ವರ್ಷ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಈ ಯೋಜನೆಯು ಉಪಯೋಗವಾಗಲಿದೆ ಎಂದರು.

ಇನ್ನು ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮವು 1200 ರೂ.ಗಳನ್ನು ಅಂದರೆ ವಾರ್ಷಿಕ 2.55 ಕೋಟಿ ರೂಪಾಯಿಯನ್ನು ಜಯದೇವ ಆಸ್ಪತ್ರೆಗೆ ಪಾವತಿ ಮಾಡುತ್ತದೆ. ಈ ಯೋಜನೆಯು ಅಂದಾಜು 62% ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ. ನಂದಿನಿ ದೇವಿ. ಕೆ, ಭಾ.ಆ.ಸೇ, ನಿರ್ದೇಶಕರು (ಸಿ ಮತ್ತು ಜಾ), ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಸಿಬ್ಬಂದಿಗಳು ನಿಗಮದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನುವಹಿಸುತ್ತಾರೆ ಆದ್ದರಿಂದ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಜವಾಬ್ದಾರಿ ಕೂಡ ಆಗಿದೆ. ಹೀಗಾಗಿ ಇಂದು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ನಿಗಮವು ಒಡಂಬಡಿಕೆ ಮಾಡಿಕೊಂಡಿದ್ದು, ಹೃದಯ ಸಂಬಂಧಿ ತಪಾಸಣೆಗಳನ್ನು  ನಿರಂತರವಾಗಿ ಮಾಡಿಸುವುದರಿಂದ ಸಂಭವನೀಯ ಹೃದಯಾಘಾತ ತಪ್ಪಿಸಲು ಮತ್ತು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಜೀವಗಳ ರಕ್ಷಣೆ ಆಗುತ್ತದೆ.  ಡಾ. ಮಂಜುನಾಥ್‌ ಅವರು ಕಡಿಮೆ ದರದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸುತ್ತಿರುವುದಕ್ಕೆ ಧನ್ಯವಾದ  ಸಲ್ಲಿಸುತ್ತೇವೆ.

l ರಾಮಲಿಂಗಾರೆಡ್ಡಿ ಸಾರಿಗೆ ಸಚಿವ

 

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ