ಕೋಲಾರ: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹೊಡೆದು ಬಂಧಿಸಿರುವ ಘಟನೆ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ 6 ಗಂಟೆಗೆ ನಡೆದಿದೆ.
ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರಿಗೂ ಗಾಯಗಳಾಗಿದ್ದು, ಆರೋಪಿಯ ಜತೆಗೆ ಗಾಯಗೊಂಡ ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹತ್ಯೆ ಪ್ರಕರಣದಲ್ಲಿ ಅಶೋಕ್ ಪ್ರಮುಖ ಆರೋಪಿ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಬಲೆ ಬೀಸಿದ್ದ ಪೊಲೀಸರು ಇಂದು ಆರೋಪಿಯನ್ನು ಸೆರೆ ಹಿಡಿದಿದ್ದರು.
ಈ ವೇಳೆ ಆರೋಪಿಯು ಸಿಬ್ಬಂದಿ ಕೋದಂಡಪಾಣಿ ಹಾಗೂ ಆಶೋಕ್ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ. ತಕ್ಷಣ ಜಾಗ್ರತರಾದ ಮಾಲೂರು ಇನ್ಸ್ಪೆಕ್ಟರ್ ವಸಂತ್ ಕುಮಾರ್ ಆರೋಪಿಯ ಬಲಗಾಲಿಗೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ಅಕ್ಟೋಬರ್ 21 ರಂದು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹತ್ಯೆ ಮಾಡಿ ಆರೋಪಿ ತಲೆ ಮರೆಸಿಕೊಂಡಿದ್ದನು. ಹೀಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿ ಕರೆದುಕೊಂಡು ಗೋಗುತ್ತಿದ್ದಾಗ ಇದೆಲ್ಲ ನಡೆದಿದೆ. ಸದ್ಯ ಆರೋಪಿ ಅಶೋಕ್ ಹಾಗೂ ಪೊಲೀಸರು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.