ಯಾದಗಿರಿ: ನೋವೆಲ್ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮನೆಯಲ್ಲಿದ್ದು ಸೋಂಕು ಹರಡುವುದನ್ನು ತಡೆಗಟ್ಟಬೇಕು. ಅನವಶ್ಯಕವಾಗಿ ಮನೆಯಿಂದ ಹೊರಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‍ನಿಂದ ತಪ್ಪಿಸಿಕೊಳ್ಳಲು ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿರುವುದೊಂದೇ ಸದ್ಯದ ಪರಿಹಾರವಾಗಿದೆ. ಸರ್ಕಾರದ ನಿರ್ಬಂಧಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ, ಸಂಸ್ಥೆ, ಸಂಘಟನೆಯ ವಿರುದ್ಧ ಪ್ರಕರಣ ಮತ್ತು ಇತರ ಸಂಬಂಧಪಟ್ಟ ಸಂಹಿತೆಗಳು, ಅಧಿನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಕುಟುಂಬಗಳ ವಿರುದ್ಧ ಪ್ರಕರಣ ದಾಖಲು
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 2 ಕುಟುಂಬಗಳು ಖಾಸಗಿ ವಾಹನದಲ್ಲಿ ಜಿಲ್ಲೆಗೆ ಬಂದಿದ್ದು, ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಯಾದಗಿರಿ ಮತ್ತು ಗುರುಮಠಕಲ್ ತಾಲೂಕಿನವರಾದ ಇವರನ್ನು ಸದ್ಯ ಅರಕೇರಾ (ಕೆ) ವಸತಿ ಶಾಲೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಾದಗಿರಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ಅನುಸಾರ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
3 ವ್ಯಕ್ತಿಗಳ ಮಾದರಿ ನೆಗೆಟಿವ್
ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 5 ವ್ಯಕ್ತಿಗಳ ಮಾದರಿಗಳಲ್ಲಿ 3 ನೆಗೆಟಿವ್ ಫಲಿತಾಂಶ ಬಂದಿವೆ. 2 ವ್ಯಕ್ತಿಗಳ ಮಾದರಿ ಪರೀಕ್ಷೆಯ ವರದಿ ಬರಬೇಕಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರು ಕಿರಾಣಿ ಅಂಗಡಿ, ಔಷಧಿ, ಹಾಲಿನ ಅಂಗಡಿ, ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಹಾಗೂ ಸರ್ಕಾರದ ಎಲ್ಲಾ ನಿರ್ಬಂಧಗಳನ್ನು ತಪ್ಪದೇ ಪಾಲಿಸುವುದು ಕಡ್ಡಾಯ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ:08473-253950 ಗೆ ಕರೆ ಮಾಡಿ ಸಹಾಯ ಪಡೆಯಬಹುದು. ಕೊರೊನಾ ವೈರಸ್‍ಗೆ ಸಂಬಂಧಪಟ್ಟಂತಹ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ವಾಟ್ಸ್‍ಆ್ಯಪ್ ಸಂಖ್ಯೆ ಆರಂಭಿಸಲಾಗಿದ್ದು, ಸಾರ್ವಜನಿಕರು ಫೋಟೊ ಅಥವಾ ಮೆಸೇಜ್‍ಗಳನ್ನು 9449933946 ಈ ಸಂಖ್ಯೆಗೆ ಕಳುಹಿಸುವ ಮೂಲಕ ನಿವೇದಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ ಉಪಸ್ಥಿತರಿದ್ದರು.