ಮಂಡ್ಯ: ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿರುವ ಪೊಲೀಸರ ಬಂಧಿಸಿ ಮತ್ತು ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಸೋಮವಾರ ಮಂಡ್ಯ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.
ಇಂದು ಜಿಲ್ಲಾಧಿಕಾರಿ ಕಚೇರಿ ಸಮೀಪದ ವಕೀಲರ ಸಂಘದ ಬಳಿ ಜಮಾಯಿಸಿದ ವಕೀಲರು ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಯಚಾಮರಾಜೇಂದ್ರ ಒಡೆಯರ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ನಂತದ ಆರ್.ಪಿ.ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿಗೆ ಮನವಿ ಸಲ್ಲಿಸಿದರು.
ನ.30ರಂದು ವಕೀಲ ಪ್ರೀತಂ ಮೇಲೆ ಸಣ್ಣ ವಿಚಾರಕ್ಕೆ ಪೊಲೀಸರು ಬೂಟಿನ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದಾರೆ. ಜನಸಾಮಾನ್ಯರು ಪೊಲೀಸ್ ಠಾಣೆಗೆ ಬರಲು ಭಯಪಡುತ್ತಿದ್ದಾರೆ. ಇನ್ನು ಸ್ವಯಂ ದೂರು ದಾಖಲಿಸಿಕೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಪ್ರತಿಭಟನೆ ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ವಕೀಲರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಸಿದ್ದರಾಜು, ಉಪಾಧ್ಯಕ್ಷ ಮರಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಕೀಲರಾದ ಬೂದನೂರು ಬೊಮ್ಮಯ್ಯ, ಗಿರೀಗೌಡ, ನವೀನ್, ಸುಮಿತ್ರಾ, ಚಂದ್ರಕಲಾ, ಶೋಭಾ ಇತರರಿದ್ದರು.
ತಿ.ನರಸೀಪುರದಲ್ಲೂ ಪ್ರತಿಭಟನೆ
ತಿ.ನರಸೀಪುರ: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಸೋಮವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.
ನ್ಯಾಯಾಲಯ ಕಲಾಪ ಬಹಿಷ್ಕರಿಸಿ ನ್ಯಾಯಾಲಯದ ಆವರಣದಿಂದ ವಿದ್ಯೋದಯ ವೃತ್ತದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ನಂತರ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಕೆಲಕಾಲ ಧರಣಿ ನಡೆಸಿದರು.
ವಕೀಲರ ಸಂಘದ ಅಧ್ಯಕ್ಷ ಮಾತನಾಡಿ, ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರು ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಅಲ್ಲಿನ ಪೊಲೀಸರು ಬಂಧಿಸಿ ಹಲ್ಲೆ ನಡೆಸಿದ್ದಾರೆ. ಇದು ಪೊಲೀಸರ ದೌರ್ಜನ್ಯಕ್ಕೆ ಸಾಕ್ಷಿಯಾಗಿದೆ. ಕೂಡಲೇ ಹಲ್ಲೆ ನಡೆಸಿದ ಪೊಲೀಸರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.