ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19ಹಿನ್ನೆಲೆಯಲ್ಲಿ ಲಾಕ್‌ಡೌನ್ ಇರುವುದರಿಂದ ಜಿಲ್ಲೆಯ ರೈತರು ಬೆಳೆದಿರುವ ಕಲ್ಲಂಗಡಿ, ಕರಬೂಜ, ಟೊಮ್ಯಾಟೋ ಹಾಗೂ ಪಪ್ಪಾಯ ಹಣ್ಣುಗಳನ್ನು ಹಾಪ್‌ಕಾಮ್ಸ್ ಹಾಗೂ ವ್ಯಾಪಾರಸ್ಥರನ್ನು ಲಿಂಕ್ ಮಾಡುವ ಮೂಲಕ ಖರೀದಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಾ, ಇದಕ್ಕಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದರು.
ರೈತರು ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಕ್ರಮ ಕೈಗೊಂಡಿದ್ದು, ಜಿಲ್ಲೆಗೆ ಅಗತ್ಯವಿರುವಷ್ಟು ಜಿಲ್ಲೆಯಲ್ಲೇ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಚಿತ್ರದುರ್ಗ, ಬೆಂಗಳೂರು ಜಿಲ್ಲೆಗಳಿಗೆ ಕಳುಹಿಸಲು ಹಾಗೂ ನೆರೆಯ ರಾಜ್ಯದ ಅನಂತಪುರದಲ್ಲಿರುವ ವ್ಯಾಪಾರಸ್ಥರನ್ನು ಲಿಂಕ್ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳನ್ನು ಎಪಿಎಂಸಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ಮನೆ-ಮನೆಗೆ ಹಾಪ್‌ಕಾಮ್ಸ್ ಮೂಲಕ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ನಿರಾಶ್ರಿತರು, ವಲಸೆ ಕಾರ್ಮಿಕರಿಗೆ ಊಟದ ವ್ಯವಸ್ಥೆ
ಕೋವಿಡ್-19 ಹರಡದಂತೆ ತಡೆಯಲು ಜಿಲ್ಲೆಯು ಲಾಕ್‌ಡೌನ್ ಆಗಿರುವ ಹಿನ್ನೆಲೆಯಲ್ಲಿ ನಿರಾಶ್ರಿತರು ಹಾಗೂ ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ 2 ನಿರಾಶ್ರಿತರ ಕೇಂದ್ರಗಳನ್ನು ಈಗಾಗಲೇ ತೆರೆಯಲಾಗಿದ್ದು, ಈ ಕೇಂದ್ರಗಳಲ್ಲಿ 122 ಜನರು ಇದ್ದು, ಅವರಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆಯಲ್ಲದೆ,1506 ಜನ ವಲಸೆ ಕಾರ್ಮಿಕರನ್ನು ಗುರುತಿಸಲಾಗಿದೆ. ಅವರಿಗೆ ಸಂಬಂಧಿಸಿದ ಗುತ್ತಿಗೆದಾರರುಗಳ ಮೂಲಕ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು.