ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ರೋಗ ನಿರೋಧಕ ದಿನ ಆಚರಣೆಯ ಅಂಗವಾಗಿ ನಡೆಯುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಶೇಕಡ 100 ರಷ್ಟು ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ 2024ನೇ ಸಾಲಿನ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ಕೈಗೊಂಡು ಸಂಬಂಧಪಟ್ಟ ಇಲಾಖೆಗಳ ಸಹಭಾಗಿತ್ವದಲ್ಲಿ ಶೇ100 ರಷ್ಟು ಪ್ರಗತಿ ಸಾಧಿಸಿ ಎಂದು ಹೇಳಿದರು. ಕೆಳೆದ ಬಾರಿಗಿಂತ ಈ ಬಾರಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಒತ್ತು ನೀಡಿ ಪ್ರತಿ ಮಗುವಿಗು ಲಸಿಕೆ ತಲುಪುವಂತೆ ಮಾಡಿ ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಲಸಿಕೆಯನ್ನು ತಲುಪಿಸಲು ಕ್ರಮ ಕೈಗೊಳ್ಳಿ ಎಂದರು.
ಗ್ರಾಮ ಪಂಚಾಯಿತಿ, ನಗರ ಸಭೆ, ಪುರ ಸಭೆ, ವಿವಿಧ ಇಲಾಖೆಗಳನ್ನು ಒಳಗೊಂಡು ಲಸಿಕಾ ದಿನದ ಪ್ರಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಆಯುಷ್ ಇಲಾಖೆ ಅಧಿಕಾರಿ ಡಾ.ಸೀಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಲತಾರೆಡ್ಡಿ, ಎಸ್ಎಂಒ ಡಾ.ನಾಗರಾಜ್ (WHO) ಸೇರಿದಂತೆ ಜಿಲ್ಲಾ ಮಟ್ಟದ ಕಾರ್ಯಕ್ರಮಾಧಿಕಾರಿಗಳು, ತಾಲೂಕು ಮಟ್ಟದ ಅರೋಗ್ಯಾಧಿಕಾರಿಗಳು, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.