ಹಾವೇರಿ: ಹೊರ ಜಿಲ್ಲೆಗಳನ್ನು ಸಂಪರ್ಕಿಸಿಸುವ ಗಡಿ ಪ್ರದೇಶಗಳಲ್ಲಿ ಸ್ಥಾಪಿಸಿರುವ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ. ಸರಕು ಸಾಗಾಣಿಕೆ ಹೊರುಪಡಿಸಿ ಹೊರ ಜಿಲ್ಲೆಯಿಂದ ಪ್ರಯಾಣಿಕರು ಕಾರಣವಿಲ್ಲದೆ ಪ್ರವೇಶಿಸುವ ಕುರಿತಂತೆ ನಿರ್ಬಂಧ ಹೇರಿ ಲಾಕ್ಡೌನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್-19 ನಿಯಂತ್ರಣ ಕುರಿತಂತೆ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಕಾಣದಂತೆ ಮತ್ತಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಈವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಗಡಿಭಾಗದ ಎಲ್ಲ ಚೆಕ್ಪೋಸ್ಟ್ಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಚಲನವಲನಗಳ ಬಗ್ಗೆ ತೀವ್ರ ನಿಗಾವಹಿಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಹೋಂ ಕ್ವಾರಂಟೆನ್ನಲ್ಲಿರುವವರ ಮೇಲೆ ತೀವ್ರ ನಿಗಾವಹಿಸಿ ದೆಹಲಿ ಸೇರಿದಂತೆ ರಾಜ್ಯದ ವಿವಿಧ ಭಾಗ, ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ದಿನಕ್ಕೆರಡುಬಾರಿ ಕೈಗೊಳ್ಳಿ. ಮಾಹಿತಿ ನೀಡದೇ ಜಿಲ್ಲೆಯಲ್ಲಿ ಉಳಿದುಕೊಂಡಿರುವ ಹೊರ ರಾಜ್ಯ ಹಾಗೂ ವಿದೇಶದಿಂದ ಬಂದವರ ಮಾಹಿತಿ ಕಲೆಹಾಕಲು ಕ್ರಮವಹಿಸಿ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಬಾರದು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾಗದ ಕಾರಣ ವೈದ್ಯಕೀಯ ಅರೇವೈದ್ಯಕೀಯ ಸಿಬ್ಬಂದಿಗೆ ಸದ್ಯದ ಸ್ಥಿತಿಯಲ್ಲಿ ಹೆಚ್ಚು ಕಾರ್ಯ ಒತ್ತಡ ಇರುವುದಿಲ್ಲ. ಈಗಿನಿಂದಲೇ ಜಿಲ್ಲೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾಮಾನ್ಯ ಆರೋಗ್ಯ ತಪಾಸಣೆ ಕೈಗೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಲಹೆ ನೀಡಿದರು.
ಕೃಷಿ ಬಿತ್ತನೆಗೆ ಅಗತ್ಯವಾದ ಬೀಜ ಹಾಗೂ ಗೊಬ್ಬರಗಳ ಕೊರತೆಯಾಗದಂತೆ ದಾಸ್ತಾನುಮಾಡಿಕೊಳ್ಳಬೇಕು. ವಿಶೇಷವಾಗಿ ಯೂರಿಯಾಗೊಬ್ಬರದ ಅಭಾವವಾಗದಂತೆ ಈಗಿನಿಂದಲೇ ಸಿದ್ಧತೆಮಾಡಿಕೊಳ್ಳಬೇಕು. ಬೀಜ ಗೊಬ್ಬರಗಳ ವಿತರಣೆಯಲ್ಲಿ ಯಾವುದೇ ಗೊಂದಲವಾಗದಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೈಗೊಂಡಿರುವ ವೈದ್ಯಕೀಯ ವ್ಯವಸ್ಥೆ ಹಾಗೂ ಲಾಕ್ಡೌನ್ ಅನುಷ್ಠಾನ, ಜನರಿಗೆ ಅಗತ್ಯ ವಸ್ತುಗಳ ಪೂರೈಕೆ, ಕೃಷಿ ಉತ್ಪನ್ನಗಳ ವಹಿವಾಟಿಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಗೃಹ ಸಚಿವರಿಗೆ ಮಾಹಿತಿ ನೀಡಿದರು.
ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.