ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಅಪರಹರಣ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ಕೂಡ ವಿಧಿಸಿರುವ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿತು.
ಏನಿದು ಪ್ರಕರಣ? ಪ್ರಜ್ವಲ್ ರೇವಣ್ಣ ಅವರದ್ದು ಎಂದು ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು.
ಈ ವೇಳೆ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.
ಸದ್ಯ ರೇವಣ್ಣ ಅವರಿಗೆ ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು ಜಾಮೀನಿನ ಮೇಲೆ ಅವರು ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು.
ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.