ಕೆ.ಆರ್.ಪೇಟೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏಕಾಏಕಿ ಏರಿಸಿ ಶ್ರೀಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಡಾ. ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ದಿಢೀರನೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರಾತ್ರೋರಾತ್ರಿ ಏರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನರ ಜೇಬಿಗೆ ನೇರವಾಗಿ ಕತ್ತರಿ ಹಾಕುತ್ತಿದೆ ಎಂದು ಕಿಡಿಕಾರಿದರು.
ಇನ್ನು ಏರಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೂಡಲೇ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ನಾರಾಯಣಗೌಡ ಜನತೆಗೆ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ಶ್ರೀಸಾಮಾನ್ಯರಿಗೆ ಹೆಚ್ಚಿನ ತೆರಿಗೆ ವಿಧಿಸುವುದಲ್ಲದೆ ಜೀವನಾವಶ್ಯಕ ವಸ್ತುಗಳು ಸೇರಿದಂತೆ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಹೆಚ್ಚಿಸಿ ಜನವಿರೋಧಿ ನೀತಿಯನ್ನು ಅನುಸರಿಸಿದೆ ಎಂದರು.
ಮಂಡ್ಯ ನಾಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್, ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ಬಿಜೆಪಿ ಉಪಾಧ್ಯಕ್ಷ ಭಾರತಿಪುರ ಪುಟ್ಟಣ್ಣ, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ರವಿಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ನಟರಾಜ್, ಕೆ.ವಿನೋದ್, ಶಿಲ್ಪಾ, ಆರ್.ಜಗಧೀಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ