ಬೆಂಗಳೂರು: ಈಗಾಗಲೇ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಶೇ.27ರಷ್ಟು ವೇತನ ಹೆಚ್ಚಳವಾವುದು ಬಹುತೇಕ ಖಚಿತವಾಗಿದ್ದು, ಈ ತಿಂಗಳ ಅಂತ್ಯದೊಳಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಮುಂದಾಗಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದು ಬಹುತೇಕ ಖಚಿತವಾಗಿದ್ದು ಇಂದು ವೇತನ ಆಯೋಗ ಜಾರಿ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೆಲ ಸಚಿವರು ಶೇ.25ರಷ್ಟು ವೇತನ ಹೆಚ್ಚಳಕ್ಕೆ ಸಲಹೆ ನೀಡಿದರೆ, ಇನ್ನು ಕೆಲ ಸಚಿವರು ಶೇ.27ರಷ್ಟು ವೇತನ ಹೆಚ್ಚಳ ಮಡುವುದಕ್ಕೆ ಸಲಹೆ ನೀಡಿದ್ದಾರೆ. ಹೀಗಾಗಿ ಶೇ.27ರಷ್ಟು ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಒಲವು ತೋರಿದ್ದಾರೆ ಎನ್ನಲಾಗಿದೆ.
ಆದರೆ ಅಂತಿಮವಾಗಿ ವೇತನ ಆಯೋಗ ಜಾರಿ ಜವಾಬ್ದಾರಿಯನ್ನು ಸಿಎಂಗೆ ನೀಡಿದ್ದು, ಈ ತಿಂಗಳ ಅಂತ್ಯದೊಳಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮಾಜಿ ಮುಖ್ಯಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16 ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು.
ಒಂದು ವೇಳೆ ಸರ್ಕಾರ ಏಳನೇ ವೇತನ ಆಯೋಗ ಸಲ್ಲಿಸಿರುವ ಅಂತಿಮ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಿದರೆ ಮಾತ್ರ ಸರ್ಕಾರಿ ನೌಕರರ ಕನಿಷ್ಠ ವೇತನವು ತಿಂಗಳಿಗೆ 17,000 ರಿಂದ 27,000ಕ್ಕೆ ಏರಿಕೆಯಾಗುತ್ತದೆ.