ಬೆಂಗಳೂರು: ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಕಾದು ಕುಳಿತಿದ್ದ ಸರ್ಕಾರಿ ನೌಕರರ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಹಿಂದೆ ನಡೆದ ಎರಡು ಸಚಿವ ಸಂಪುಟ ಸಭೆಯಲ್ಲಿ ವರದಿ ಜಾರಿ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ನೌಕರರು ಹೋರಾಟದ ಹಾದಿ ತುಳಿಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಅಲ್ಲದೆ ಇದೇ ಜುಲೈ 29ರಿಂದ ಅರ್ನಿಷ್ಟ ಅವಧಿ ಮುಷ್ಕರ ಮಾಡುವುದಾಗಿ ಈಗಾಗಲೇ ಸರ್ಕಾರಿ ನೌಕರರ ಸಂಘ ಜಿಲ್ಲಾ, ರಾಜ್ಯ ಮಟ್ಟದಲ್ಲಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇನ್ನು ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಸರ್ಕಾರ ಮುಂದಾಗುವುದು ಎಂಬುದನ್ನು ನಾಳೆವರೆಗೆ ಕಾದು ನೋಡಬೇಕಿದೆ.
ಏಕೆಂದರೆ ನಾಳೆ ಅಂದರೆ ಜುಲೈ 15ರಂದು ಮತ್ತೊಮ್ಮೆ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸರ್ಕಾರ ನೌಕರರಿಗೆ 7ನೇ ವೇತನ ಆಯೋಗದ ವರದಿ ಜಾರಿ ಮಾಡುವ ತೀರ್ಮಾನ ತೆಗೆದುಕೊಂಡದರೆ ಮುಷ್ಕರದ ಬೇಗುದಿಯಿಂದ ತಪ್ಪಿಸಿಕೊಳ್ಳಬಹುದು. ಒಂದು ವೇಳೆ ತಟಸ್ಥವಾಗಿ ಸಂಪುಟ ಸಭೆಯಲ್ಲಿ ಮತ್ತೆ ಮೌನವಹಿಸಿದರೆ ನೌಕರರ ಹೋರಾಟವನ್ನು ಬೇಧಿಸಬೇಕಾಗುತ್ತದೆ.
ಹೌದು! ರಾಜ್ಯ ಕಾಂಗ್ರೆಸ್ ಸರ್ಕಾರ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ವಿಳಂಬ ಮಾಡುತ್ತಿದೆ. ಇದರಿಂದಾಗಿ ಅಸಮಾಧಾನಗೊಂಡಿರುವ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಘೋಷಣೆ ಮಾಡಿದ್ದಾರೆ. ಒಟ್ಟು ಎರಡು ಹಂತದಲ್ಲಿ ನೌಕರರ ಹೋರಾಟ ನಡೆಸಲು ಸಜ್ಜಾಗಿದ್ದಾರೆ.
ಇತ್ತೀಚೆಗಷ್ಟೇ ಚಿಕ್ಕಮಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿ ಸಭೆ ನಡೆಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, “7ನೇ ವೇತನ ಆಯೋಗ ವರದಿ ನೀಡಿದರೂ ಸರ್ಕಾರ ಜಾರಿಗೊಳಿಸಿಲ್ಲ” ಎಂದು ಆರೋಪಿಸಿದರು.
ಅಲ್ಲದೆ “7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿ, ಹಳೆ ಪಿಂಚಣಿ ಯೋಜನೆ ಮುಂದುವರಿಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಎಲ್ಲರೂ ಮಾನಸಿಕವಾಗಿ ಸಿದ್ಧರಾಗಿ ಎಂದು ಕರೆ ನೀಡಿದರು.
ಇನ್ನು ಎರಡು ಹಂತದಲ್ಲಿ ಹೋರಾಟ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಜುಲೈ 8 ರಿಂದ 14ರ ತನಕ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಕೆ ಮಾಡಲಾಗುವುದು. ಅಂದರೆ ಇಂದಿಗೆ (ಜುಲೈ14) ಆ ಎಲ್ಲವನ್ನು ನೌಕರರ ಸಂಘ ಮಾಡಿ ಮುಗಿಸಿದೆ. ಇನ್ನು ಈ ಬಗ್ಗೆ ನಾಳೆ ಸಚಿವ ಸಂಪುಟ ಸಭೆಯಲ್ಲಿ ಏನು ತೀರ್ಮಾನ ತೆಗೆದುಕೊಳ್ಳದಿದ್ದರೆ ಬೆಂಗಳೂರಿನಲ್ಲಿ ಮತ್ತೊಮ್ಮೆ ರಾಜ್ಯ ಕಾರ್ಯಕಾರಣಿ ಸಭೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು ತೀರ್ಮಾನಿಸಿದೆ.
ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ. ಜುಲೈ ತಿಂಗಳ ಕೊನೆ ಅಥವಾ ಆಗಸ್ಟ್ ಆರಂಭದಿಂದಲೇ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಗುತ್ತದೆ. ಅಮಾನತು, ಎಸ್ಮಾ ಜಾರಿ ಸೇರಿದಂತೆ ಯಾವುದೇ ಒತ್ತಡ, ಬೆದರಿಕೆಗಳಿಗೆ ಬಗ್ಗದೆ ಕರ್ತವ್ಯ ಬಹಿಷ್ಕಾರ ಮಾಡಿ ಚಳವಳಿ ನಡೆಸಬೇಕು” ಎಂದು ಸಿ.ಎಸ್. ಷಡಾಕ್ಷರಿ ಸರ್ಕಾರಿ ನೌಕರರಿಗೆ ಅಂದಿನ ಸಭೆಯಲ್ಲಿ ಕರೆ ನೀಡಿದ್ದಾರೆ.
ಇನ್ನು ಹಳೇ ಪಿಂಚಣಿ ಯೋಜನೆ ಮುಂದುವರಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸೇರಿದಂತೆ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ರಾಜ್ಯದ 6 ಲಕ್ಷ ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿಯಬೇಕು. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾರ್ಚ್ 16 ರಂದು ಕೆ.ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ವರದಿ ನೀಡಿದೆ. ವರದಿ ನೀಡಿದ ದಿನವೇ ಲೋಕಸಭೆ ಚುನಾವಣೆ 2024ರ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಆದ್ದರಿಂದ ಜೂನ್ 6ರ ತನಕ ವರದಿ ಜಾರಿ ಸಾಧ್ಯವಾಗಲಿಲ್ಲ.
ಇನ್ನು ವರದಿಯಲ್ಲಿ ಮೂಲ ವೇತನದ ಶೇಕಡ 27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಲಾಗಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಅಲ್ಲದೇ ವರದಿಯನ್ನು ಹಣಕಾಸು ಇಲಾಖೆಗೆ ನೀಡಿ ಇಲಾಖೆಯಿಂದ ಬರುವ ಅಭಿಪ್ರಾಯದ ಆಧಾರದ ಮೇಲೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ಮತ್ತೊಂದೆಡೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ತೆರವಾದ ಬಳಿಕ ಸಚಿವ ಸಂಪುಟ ಸಭೆ ನಡೆದಿದೆ. ಆ ಸಭೆಯಲ್ಲೂ ಸಿದ್ದರಾಮಯ್ಯ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಸಚಿವರ ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ. ಆದರೆ ವರದಿ ಜಾರಿ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಮಾಡಿಲ್ಲ.
ಇನ್ನು ಹಣಕಾಸು ಇಲಾಖೆ ಅಧಿಕಾರಿಗಳು ಸಚಿವ ಸಂಪುಟ ಸಭೆಯಲ್ಲಿಯೇ ಸಚಿವರಿಗೆ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವುದು ಏಕೆ ಕಷ್ಟ ಎಂದು ಅಂಕಿ-ಸಂಖ್ಯೆಗಳ ಸಮೇತ ವಿವರಣೆ ನೀಡಿದ್ದಾರೆ. ಇದರಿಂದ ಸರ್ಕಾರ ಈಗಿನ ಪರಿಸ್ಥಿತಿ ನೋಡಿದರೆ ಅತ್ತ ದರಿ ಇತ್ತ ಪುಲಿ ಎಂಬಂತೆ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದೆ.
ಈ ಎಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ನಡೆಯುವ ಸಂಪುಟ ಸಭೆಯಲ್ಲಿ ನೌಕರರ 7ನೇ ವೇತನ ಆಯೋಗದ ವರದಿ ಜಾರಿಗೊಳಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವರೆ ಅಥವಾ ಮುಂದೂಡುವರೆ ಎಂಬುದನ್ನು ಕಾದು ನೋಡಬೇಕುದೆ. ಜತೆಗೆ ಸಾರಿಗೆ ನೌಕರರಿಗೂ 2024ರ ಜನವರಿ 1ರಿಂದ ವೇತನ ಪರಿಷ್ಕರಣೆ ಜಾರಿ ಮಾಡುವುದು ಮತ್ತು 38 ತಿಂಗಳ ಶೇ.15ರಷ್ಟು ವೇತನ ಹೆಚ್ಚಳದ ಹಿಂಬಾಕಿ ಕೊಡುವುದರ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಬೇಕಿದೆ.