ಬೆಂಗಳೂರು: ಸಾಮಾಜಿಕ ಹಾಗೂ ಆರ್ಥಿಕವಾಗಿ ಹೆಚ್ಚು ಹಿಂದುಳಿದಿರುವ ಪರಿಶಿಷ್ಟ ಜಾತಿಗಳಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ರಾಜ್ಯಗಳಿಗೆ ಇದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸ್ವಾಗತಿಸಿದ್ದಾರೆ.
ಅಲ್ಲದೆ ಇದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿರುವ ಪರಿಶಿಷ್ಟ ಸಮಾಜದ ಜನತೆಗೆ ಸಿಕ್ಕ ಜಯ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಹರ್ಷ ವ್ಯಕ್ತಪಡಿಸಿದ್ದಾರೆ.
ಇನ್ನು ರಾಜ್ಯ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ ಕಳೆದ 12 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಚಂದ್ರು ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿರುವ ಎಲ್ಲ ಅಂಶಗಳನ್ನು ಜಾರಿಗೆ ತರಬೇಕು. ಪರಿಶಿಷ್ಟ ವರ್ಗಗಳ ಬಹಳ ವರ್ಷಗಳ ಆಂದೋಲನದ ಪರಿಣಾಮವಾಗಿ ರಾಜ್ಯ ಸರ್ಕಾರಕ್ಕೆ ನೀಡಿರುವ ಈ ಅಧಿಕಾರವನ್ನು ಶೋಷಿತ ಸಮಾಜಗಳನ್ನು ಮೇಲೆತ್ತುವಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಾದರಿಯಾಗಬೇಕಿದೆ ಎಂದು ಹೇಳಿದ್ದಾರೆ.
ಇನ್ನು ಅಹಿಂದ ವರ್ಗದಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ವರ್ಗಗಳೊಂದಿಗೆ ಸೂಕ್ತ ಸಮಾಲೋಚನೆ – ಸಂಧಾನಗಳ ಮೂಲಕ ಮೂಲಕ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.