ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಮಗು ಮೃತಪಟ್ಟಿರುವ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ.
ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗ ನಿರಂಜನ್ ಮೃತ ಬಾಲಕ. ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ.
ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಕೆ.ಸಿ.ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದೆ.
ಮೃತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ. ಜತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್ನಲ್ಲಿ ಈ ಕುಟುಂಬ ವಾಸವಾಗಿತ್ತು.
ಘಟನೆಯ ವಿಷಯ ತಿಳಿದ ಮಲ್ಲೇಶ್ವರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.