ಕೆ.ಆರ್.ಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಕರೆ ನೀಡರುವ ಅನಿರ್ದಿಷ್ಟಾವಧಿ ಮುಷ್ಕರ ಇಂದಿನಿಂದ ಆರಂಭವಾಗಿದ್ದು, ರೈತರ ಕೆಲಸ ಕಾರ್ಯಗಳು ಸ್ಥಗಿತಗೊಂಡಿವೆ.
ಪಟ್ಟಣದ ತಾಲೂಕು ಆಡಳಿತ ಕಾರ್ಯ ಸೌಧದ ಆವರಣದಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಂಘದ ಜಿಲ್ಲಾಧ್ಯಕ್ಷ ಹರೀಶ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಈ ವೇಳೆ ಮಾತನಾಡಿದ ಮಂಡ್ಯ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಗ್ರಾಮ ಆಡಳಿತ ಅಧಿಕಾರಿಗಳ ಮೂರು ಬೇಡಿಕೆಗಳ ಈಡೇರಿಸಬೇಕು ಎಂದು ಆಗ್ರಹಿಸಿದರು.
ಮೊಬೈಲ್ ಆಫ್ ಬಳಕೆ, ವೆಬ್ ಪೇಜ್ ಸಮಸ್ಯೆ ಸೇರಿದಂತೆ, ರಜಾ ದಿನಗಳಲ್ಲಿಯೂ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ಸದಾ ಮಾನಸಿಕ ಒತ್ತಡಗಳ ನಡುವೆ ಕೆಲಸ ಮಾಡುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಮಾನವೀಯ ನೆಲಗಟ್ಟಿನ ಆಧಾರದ ಮೇರೆಗೆ ಬಗೆಹರಿಸಿ ಅನುಕೂಲ ಮಾಡಿ ಕೊಡಬೇಕು ಎಂದು ಒತ್ತಾಯಿಸಿದರು.
ಇನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೇವಾ ಮುಂಬಡ್ತಿ ನೀಡುವುದು, ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವುದು ಸೇರಿದಂತೆ ರಾಜ್ಯದಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ 5000ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹರೀಶ್ ಆಗ್ರಹಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಚಂದ್ರಕಲಾ ಅವರು ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ತಮ್ಮ ಬೆಂಬಲವನ್ನು ಸೂಚಿಸಿದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ