ಬೆಂಗಳೂರು ಗ್ರಾಮಾಂತರ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿಗಳ ನಗದು ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಸ್ಮರಣಾರ್ಥ ಈ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಈಗಾಗಲೇ 2023-24ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡಿದ ಮಹೇಶ್ವರಿ ಎಂ. (ತಂದೆ- ಮಧುಸೂದನ್ ಡಿ.ಕೆ.) ಅವರು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕಗಳಿಗೆ 620 ಅಂಕ ಗಳಿಸುವ ಮೂಲಕ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಹಾಗಾಗಿ ಇವರು ರೂ.1 ಲಕ್ಷಗಳ ನಗದು ಪ್ರೋತ್ಸಾಹಧನ ಪಡೆಯಲು ಅರ್ಹರಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.