ತುಮಕೂರು: ರಸ್ತೆಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ.
ಬುಧವಾರ ಬೆಳಗ್ಗೆ 6:30ರ ಸುಮಾರಿಗೆ ಘಟನೆ ನಡೆದಿದ್ದು, ಗುರುರಾಜು (35), ಪುತ್ರ ರಿಷಾಂಕ್(2) ಮೃತಪಟ್ಟವರು. ಪತ್ನಿ ಹರ್ಷಿತಾ (28) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಡರಿಗಿಯಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುವನ್ನು ಶಿರಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.