ಬೆಳಗಾವಿ: ಕ್ವಾರಂಟೈನ್ ಕೇಂದ್ರಗಳಲ್ಲಿ ರಾತ್ರಿ ವೇಳೆ ಕೂಡ ನಿಗಾ ವಹಿಸುವ ಮೂಲಕ ಸೋಂಕಿತರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಧ್ಯವಾದರೆ ಪ್ರತ್ಯೇಕವಾಗಿ ಇರಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಕೊವೀಡ್ -19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಯಾವುದೇ ಕಾರಣಕ್ಕೂ ಅದು ಸಮುದಾಯಕ್ಕೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚು ಮಾದರಿಗಳ ಪರಿಶೀಲನೆಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್ ಗಳನ್ನು ಬೆಳಗಾವಿ ಜಿಲ್ಲೆಗೂ ಒದಗಿಸಲು ಸರ್ಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ಸೋಂಕಿತರ ಚಿಕಿತ್ಸೆ ವೇಳೆ ವೈದ್ಯರಿಗೆ ಅಗತ್ಯವಿರುವ ಪಿಪಿಇ ಕಿಟ್ ಗಳನ್ನು ನೇರವಾಗಿ ಖರೀದಿಸಲು ಅವಕಾಶವಿದ್ದರೆ ಪಡೆದುಕೊಳ್ಳಬಹುದು. ಕೆಲವೊಮ್ಮೆ ದಾನಿಗಳಿಂದ ಕೂಡ ಪ್ರಮಾಣೀಕೃತ ಕಿಟ್ ಗಳನ್ನು ಪಡೆದುಕೊಂಡು ಅಗತ್ಯಕ್ಕೆ ತಕ್ಕಂತೆ ಬಳಸಬಹುದು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪೊಲೀಸ್ ಬಂದೋಬಸ್ತ್, ಕ್ವಾರಂಟೈನ್ ಕೇಂದ್ರಗಳ ಮೇಲೆ ನಿಗಾ ವಹಿಸಲು ಹೆಚ್ಚುವರಿ ಪೊಲೀಸ್ ಪಡೆ ಬೇಕಾದರೆ ಕರೆಯಿಸಿಕೊಳ್ಳಬೇಕು ಎಂದು ಸಚಿವ ಶೆಟ್ಟರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕುಡಚಿ ಮತ್ತು ಹಿರೇಬಾಗೇವಾಡಿಯಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಕೈಗಾರಿಕೆಗಳನ್ನು ಆರಂಭಿಸುವ ಕುರಿತು ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗುವುದು.
ಸೂಕ್ತ ಮುನ್ನೆಚ್ಚರಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಪರಿಶೀಲಿಸಿ ಕಾರ್ಖಾನೆ ಆರಂಭಕ್ಕೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಗದೀಶ್ ಶೆಟ್ಟರ್ ಹೇಳಿದರು.