ಬೆಂಗಳೂರು: 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ (ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ) ಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಇದೇ ತಿಂಗಳ ಅಂದರೆ ಫೆಬ್ರವರಿ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಆದೇಶ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಸ್ಸಿ, ಪಿ-ಟಿಎಸ್ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದಿಂದ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವು ಸರಿಯಾಗಿ, ಸಮರ್ಪಕವಾಗಿ ಬಳಕೆಯಾಗಬೇಕು. ಕೆಲವು ಇಲಾಖೆಗಳು ಈಗಾಗಲೇ ಶೇ.100 ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಇಲಾಖೆಗಳು ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಅನುದಾನ ಖರ್ಚು ಮಾಡಿ ಪ್ರಗತಿ ವರದಿ ನೀಡಬೇಕು ಎಂದರು.
ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವಶ್ಯಕತೆ ಇರುವವರಿಗೆ ಸೌಲಭ್ಯ ಕಲ್ಪಿಸಿ. ಪ.ಜಾತಿ, ಪ.ಪಂಗಡಗಳು ವಾಸಿಸುವ ಗ್ರಾಮಗಳಲ್ಲಿ ಹದಗೆಟ್ಟ ರಸ್ತೆಗಳನ್ನು ಗುರುತಿಸಿ ರಸ್ತೆಗಳನ್ನು ನಿರ್ಮಿಸಿ. ಕಳೆದ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಫಲಾನುಭವಿಗಳ ಈಗಿನ ಆರ್ಥಿಕ ಸ್ಥಿತಿಗತಿ, ಅನುದಾನ ಸದ್ಬಳಕೆ ಆಗಿದೆಯೇ? ಇಲ್ಲವೇ? ಎಂಬುದನ್ನು ಪರಿಶೀಲಿಸಿ ವರದಿ ನೀಡಿ ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.