ಲಖನೌ: ಉತ್ತರ ಪ್ರದೇಶದಲ್ಲಿ ಜೂನ್ 30ರವರೆಗೂ ಸಾರ್ವಜನಿಕರು ಗುಂಪು ಸೇರಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೂಚನೆ ನೀಡಿದ್ದಾರೆ.
ಶನಿವಾರ ಮುಖ್ಯಮಂತ್ರಿ ಕಚೇರಿಯಿಂದ ಈ ಕುರಿತು ಟ್ವಿಟ್ ಮಾಡಿದ್ದು, ಜೂನ್ 30ರ ಬಳಿಕ ಪರಿಸ್ಥಿತಿ ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಟ್ವಿಟ್‌ನಲ್ಲಿ ವಿವರಿಸಲಾಗಿದೆ.
ಸಿಎಂ ಮಾಧ್ಯಮ ಕಾರ್ಯದರ್ಶಿ ಸಹ ಈ ಕರಿತು ಟ್ವಿಟ್ ಮಾಡಿದ್ದು, ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಂಜಾನ್ ತಿಂಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಮನೆಗಳಲ್ಲಿಯೇ ಪ್ರಾರ್ಥನೆ ಮಾಡುವಂತೆ ಧರ್ಮದ ಎಲ್ಲಾ ಮುಖಂಡರು ಮನವಿ ಮಾಡಿದ್ದಾರೆ. ಆದ್ದರಿಂದ ಎಲ್ಲಿಯೂ ಯಾವುದೇ ಕಾರ್ಯಕ್ರಮಗಳು, ಆಯೋಜನೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಹಾಗೂ ಪೊಲೀಸ್ ಮುಖ್ಯಸ್ಥರ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಿಎಂ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಈ ಬಗ್ಗೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಆದರೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗಿ ಆವರಿಸುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನರ ಸಹಕಾರವು ಹೆಚ್ಚಾಗಿ ಬೇಕಾಗಿದೆ.