ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.
ಕೆಅರ್‌ಎಸ್, ಕಬಿನಿ ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಲಕಾಡು ನಿಸರ್ಗಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ತಲಕಾಡು ಗ್ರಾಮದ ನಿಸರ್ಗಧಾಮ ಗೇಟ್ ಕ್ಲೋಸ್ ಮಾಡಿ ತಾಲೂಕು ಆಡಳಿತ ನೋಟಿಸ್ ಅಂಟಿಸಿದ್ದು, ಪ್ರವಾಸಿಗರು, ಸ್ಥಳೀಯರು ನದಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ನಿಸರ್ಗಧಾಮದ ಒಳಗಿನ ಬೋಟಿಂಗ್ ಕೂಡ ಸ್ಥಗಿತಗೊಳಿಸಲಾಗಿದೆ. ಇದರ ಜತೆಗೆ ನದಿಯ ಸುತ್ತ ಪೊಲೀಸರ ಕಣ್ಗಾವಲು ಇಡಲಾಗಿದೆ.
ಎಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ, ನುಗು ಹಾಗೂ ತಾರಕ ಜಲಾಶಯದಲ್ಲಿ ಹೊರ ಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಮೂರು ಜಲಾಶಯಗಳಿಂದ ನೀರು ಹೊರ ಬಿಡುತ್ತಿರುವುದರಿಂದ ಜಲಾಶಯಗಳ ಅಕ್ಕಪಕ್ಕಗಳಲ್ಲಿ ವಾಸ ಮಾಡುತ್ತಿರುವ ಜನರಿಗೆ, ಪ್ರವಾಹ ಭೀತಿ ಎದುರಾಗಿದೆ.
ಒಂದು ವಾರ ಸಾಧಾರಣ ಮಳೆ: ಕರಾವಳಿ ಜಿಲ್ಲೆ ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡಿನಲ್ಲೂ ಮಳೆ ಕಡಿಮೆಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ತನ್ನ ನರ್ತನವನ್ನು ಕಡಿಮೆ ಮಾಡಿಕೊಂಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ನಡುವೆ, ಸೋಮವಾರ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಮತ್ತು ಉತ್ತರ ಒಳನಾಡಿನ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಆಗುಂಬೆ 6, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್ 5, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಸನ, ಕೊಡಗು, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾರಣವಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Related

 










