ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ನಿರ್ವಹಿಸಲು ಸಾಧ್ಯವಾಗದೆ ಹೆಣಗಾಡುತ್ತಿದೆ. ಹೀಗಾಗಿ ಸೇವೆ ಮತ್ತು ಬದ್ದತೆಗೆ ಹೆಸರಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳನ್ನುಬಡವಾಗಿಸಿದೆ ಈ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.
ಇನ್ನು ಪಾಪ ಶ್ರಮವಹಿಸಿ ಡ್ಯೂಟಿ ಮಾಡುತ್ತಿರುವ ನೌಕರರ ಹಿತಾಸಕ್ತಿಯನ್ನು ಕಡೆಗಣಿಸಿದೆ. ಸಾರಿಗೆ ನಿಗಮಗಳ ನೌಕರರು ಸಂಕಷ್ಟಗಳ ನಡುವೆ ತಮ್ಮ ಸೇವಾನಿಷ್ಠೆಯನ್ನು ಸಂಯಮದಿಂದ ಮುಂದುವರೆಸಿಕೊಂಡು ಬಂದಿದ್ದರೂ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಾದ ಸರ್ಕಾರ ವೇತನ ಪರಿಷ್ಕರಣೆ ಮಾಡದೆ, ಬರೋಬ್ಬರಿ 38 ತಿಂಗಳ ಬಾಕಿ ವೇತನವನ್ನೂ ಬಿಡುಗಡೆ ಮಾಡದೆ ಸಬೂಬು ಹೇಳಿಕೊಂಡು ನೌಕರರ ದಿಕ್ಕು ತಪ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ರೀತಿ ನೌಕರರನ್ನು ಯಾಮಾರಿಕೊಂಡು ಬರುವ ಮೂಲಕ ಬೀದಿಪಾಲು ಮಾಡುತ್ತಿರುವ ಈ ಸರ್ಕಾರದಿಂದ ಸಂಬಳವನ್ನೇ ನಂಬಿ ಕುಟುಂಬ ನಿರ್ವಹಣೆ ಮಾಡುತ್ತಿರುವ ಸಿಬ್ಬಂದಿಗಳ ಸ್ಥಿತಿ ಹೇಳತೀರದಾಗಿದೆ ಎಂದು ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ.
ಈವರೆಗೂ ನೌಕರರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ನೀಡದೇ ನೌಕರರ ಹಿತಾಸಕ್ತಿಯನ್ನು ತಾತ್ಸಾರದಿಂದ ನೋಡುತ್ತಿರುವ ರಾಜ್ಯ ಸರ್ಕಾರ ಈ ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದು, ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಆ.5ರಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಮ್ಮ ಪಕ್ಷ ನೈತಿಕವಾಗಿ ಬೆಂಬಲ ನೀಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
Related
