NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಪ್ಲಾಸ್ಟರ್ ಆಫ್ ಪ್ಯಾರಿಸ್ ಬಿಡಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ: ರಾಜ್ಯ ಮಾಲಿನ್ಯ ಮಂಡಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ.

ಸಾರ್ವಜನಿಕರು ಸಾಮಾನ್ಯವಾಗಿ ಪಿಒಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ, ಕಲ್ಯಾಣಿಗಳಲ್ಲಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ರೀತಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತವೆ.

ಹೀಗಾಗಿ ಪಿಒಪಿ ವಿಗ್ರಹಗಳಿಂದ ಭೌತಿಕ ಹಾಗೂ ರಾಸಾಯನಿಕವಾಗಿ ನೀರಿನ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ಆಗುವ ದುಷ್ಪರಿಣಾಮದಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅದಲ್ಲದೆ ಅ ನೀರನ್ನು ಬಳಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತದೆ.

ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಮತ್ತು ನೀರಿನ ಮೂಲಗಳ ಆಮ್ಲೀಯತೆಯನ್ನು ಹೆಚ್ಚಿಸುವುದರಿಂದ ಜಲಚರಗಳಿಗೆ ಹಾನಿಕಾರಕವಾಗಿದೆ. ಜಲಮೂಲಗಳ ಮಾಲಿನ್ಯದಿಂದಾಗಿ ಇಡೀ ಪರಿಸರ ವ್ಯವಸ್ಥೆಯು ಅಸಮತೋಲನಗೊಳ್ಳುತ್ತದೆ.

ಪ್ಲಾಸ್ಟರ್ ಅಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಕಾಯ್ದೆ ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು.

ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಮತ್ತು ಒಣಕಸವಾಗಿ ಪ್ರತ್ಯೇಕಿಸಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಅಲಂಕಾರಕ್ಕೆ ಮತ್ತು ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು, ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ತಿಳಿಸಿದೆ.

Megha
the authorMegha

Leave a Reply

error: Content is protected !!