NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 47,848 ಮನೆಗಳು ಮಂಜೂರು: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಇನ್ನು ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ ಎಂದರು.

ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ. ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ 900 ಕೋಟಿ ರೂ.ಅನುದಾನ ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ವಸತಿ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
ವಿಜಯಪಥ - vijayapatha.in
Megha
the authorMegha

Leave a Reply

error: Content is protected !!