ಲೇಖಕಿ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ವಿಚಾರ ಸುಪ್ರೀಂ ಕೋರ್ಟ್ ಅಂಗಳಕ್ಕೆ-ನಾಳೆ ತುರ್ತು ವಿಚಾರಣೆ

ನ್ಯೂಡೆಲ್ಲಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ.
ಮೊನ್ನೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಎಚ್.ಎಸ್.ಗೌರವ್ ಎಂಬವರು ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಇವರು ಇದೆ ಸೆ.22 ರಂದು ದಸರಾ ಉದ್ಘಾಟನೆ ನಡೆಯಲಿದೆ. ಹೀಗಾಗಿ ತುರ್ತು ಅರ್ಜಿ ವಿಚಾರಣೆ ಮಾಡಬೇಕೆಂದು ಸಿಜೆಐ ಗವಾಯಿ ಪೀಠದ ಮುಂದೆ ಮನವಿ ಮಾಡಿದ್ದಾರೆ.
ಎಚ್.ಎಸ್.ಗೌರವ್ ಅವರು ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಶುಕ್ರವಾರ (ಸೆ.18) ವಿಚಾರಣೆ ನಡೆಸುವುದಾಗಿ ಹೇಳಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ಏನಾಯಿತು?: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಗಳನ್ನು ಸೆ.15 ರಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.
ಈ ವೇಳೆ ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು, ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ? ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ವಿರುದ್ಧ ಹೇಗೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿತು.
ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಬಾನು ಮುಷ್ತಾಕ್ ಅವರಿಗೆ ಸೇರಿದ ವಿಚಾರ. ವಿಜಯದಶಮಿ ಎಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ ಅಲ್ವಾ? ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ ಎಂದು ನ್ಯಾಯಪೀಠ ಹೇಳಿತು.

ಈ ವೇಳೆ ವಾದಕ್ಕೆ ಪ್ರತಾಪ್ ಸಿಂಹ ಪರ ವಕೀಲ ಸುದರ್ಶನ್ ಮುಂದಾದಾಗ ನೀವು ಹೀಗೇ ವಾದಿಸಿದರೆ ಆದೇಶ ಆಗಿದೆ. ದಂಡ ವಿಧಿಸಬೇಕಾ ಎಂದು ಕಟುವಾಗಿ ಪ್ರಶ್ನಿಸಿ ಈ ನ್ಯಾಯಾಲಯದಲ್ಲಿ ನೀವು ಹೀಗೆಲ್ಲ ಮಾಡಲಾಗದು ಎಂದು ಹೇಳಿತು.
Related
