ಬೆಂಗಳೂರು: ಜೂನ್ 29 ರಂದು ವಿಧಾನ ಪರಿಷತ್ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ರಾಜ್ಯಸಭಾ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಗಳನ್ನು ಹೈಕಮಾಂಡ್ ಪ್ರಕಟ ಮಾಡಿದ್ದರಿಂದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತೀವ್ರ ಕುತೂಹಲ ಮೂಡಿಸಿತ್ತು. ನಿರೀಕ್ಷೆಯಂತೆ ಹೈಕಮಾಂಡ್ ಒಬ್ಬ ಅಚ್ಚರಿಯ ಅಭ್ಯರ್ಥಿಯನ್ನು ಸೇರಿಸಿ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಇಬ್ಬರಿಗೆ ವಿಧಾನ ಪರಿಷತ್ ಪ್ರವೇಶಿಸಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ.
ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್ ಶಂಕರ್, ಮಾಜಿ ಶಾಸಕ ಸುನಿಲ್ ವಲ್ಯಾಪುರೆ, ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ ಅವರು ಬಿಜೆಪಿ ಅಭ್ಯರ್ಥಿಗಳೆಂದು ಘೋಷಣೆ ಮಾಡಿದೆ.
ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಮಾಜಿ ಶಾಸಕ ಸುನಿಲ್ ವಲ್ಯಾಪುರೆ ರಾಜ್ಯದಲ್ಲಿ ಸರ್ಕಾರ ರಚನೆಗೆ ಕಾರಣರಾಗಿದ್ದಾರೆ ಎಂಬ ಕಾರಣಕ್ಕೆ ಹಾಗೂ ಪ್ರತಾಪ್ ಸಿಂಹ ನಾಯಕ್ ಪಕ್ಷದ ನಿಷ್ಠಾವಂತ ಎಂದು ಹೈಕಮಾಂಡ್ ಟಿಕೆಟ್ ನೀಡಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇನ್ನು ವಿಧಾನ ಪರಿಷತ್ ಆಯ್ಕೆ ಬಯಸಿದ್ದ ಮಾಜಿ ಸಚಿವ ಎಚ್. ವಿಶ್ವನಾಥ್ ಮತ್ತೆ ಅತಂತ್ರರಾಗಿದ್ದಾರೆ. ವಿಧಾನ ಪರಿಷತ್ ಟಿಕೆಟ್‌ಗೆ ತೀವ್ರ ಪ್ರಯತ್ನ ನಡೆಸಿದ್ದರು. ಆದರೂ ಅವರ ಹೆಸರನ್ನು ಹೈಕಮಾಂಡ್ ಪರಿಗಣಿಸಿಲ್ಲ. ಹೀಗಾಗಿ ಅದು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದ ಮೇಲೆ ಪರಿಣಾಮ ಬೀರಿದರೂ ಅಚ್ಚರಿಯಿಲ್ಲ.
ಇದನ್ನೂ ಓದಿರಿ: ಜೂನ್ 29ರಂದು ವಿಧಾನ ಪರಿಷತ್ ಚುನಾವಣೆ: ಆಯೋಗ ಘೋಷಣೆ
ಮೊನ್ನೆ ನಡೆದಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿತ್ತು. ಇದೀಗ ಹೈಕಮಾಂಡ್ ಅಣತಿಯಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಇಂದು (ಜೂನ್ 18) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 19ರಂದು ನಾಮಪತ್ರಗಳ ಪರಿಶೀಲನೆ ಮತ್ತು ಜೂನ್ 22 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ. ಜೂನ್ 29ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಜೂನ್ 30ಕ್ಕೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail