NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಾಣಿಗಳ ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಗಳ ಪದಕ ವಿತರಿಸಿ ಮಾತನಾಡಿದರು.

ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ಹುಲಿ, ಆನೆಗಳ ಹತ್ಯೆ ಅತ್ಯಂತ ಗಂಭೀರ ಅಪರಾಧಗಳು. ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ನಾಶಪಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

Advertisement

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

Megha
the authorMegha

Leave a Reply

error: Content is protected !!