ಬೆಂಗಳೂರು: ಮೊದಲನೆ ದಿನವಾದ ಗುರುವಾರ ನಡೆದ ದ್ವಿತೀಯ ಭಾಷೆ ಆಂಗ್ಲ ಮತ್ತು ಕನ್ನಡ ವಿಷಯಗಳ ಪರೀಕ್ಷೆಗೆ ನೋಂದಾಯಿತ 7,85,140 ವಿದ್ಯಾರ್ಥಿಗಳ ಪೈಕಿ 7,71,878 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 98.3 ರಷ್ಟು ಹಾಜರಾತಿ ಇತ್ತು. 13,212 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮೊದಲ ಬಾರಿಗೆ 7,43,688 ಶಾಲಾ ವಿದ್ಯಾರ್ಥಿಗಳು ಹಾಗೂ 20,892 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಕಂಟೈನ್ಮೆಂಟ್ ಪ್ರದೇಶಗಳ 998 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 201 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಯವುದೇ ವಿದ್ಯಾರ್ಥಿಯೂ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಪ್ರಕರಣಗಳು ಇರುವುದಿಲ್ಲ. ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು, 1438 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ನೆರೆ ರಾಜ್ಯಗಳಿಂದ 614 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 59 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 555 ಪರೀಕ್ಷೆ ಬರೆದಿದ್ದಾರೆ. 12644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12,548 ವಿದ್ಯಾರ್ಥಿಗಳು ಹಾಜರಾಗಿದ್ದರೆ, 96 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವಿವರಿಸಿದರು.
ಪರೀಕ್ಷಾ ಕೇಂದ್ರಕ್ಕೆ 3,212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಹೇಳಿದರು.
ಒಟ್ಟಾರೆಯಾಗಿ ಇಂದು 2879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ಇಂಗ್ಲಿಷ್ ಭಾಷಾ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಸ್ವಯಂ ಸೇವಕರು ಅತ್ಯಂತ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.
ನಾನು ನೀಡಿದ ಭರವಸೆಯಂತೆ ಪರೀಕ್ಷೆ ಸುವ್ಯಸ್ಥಿತವಾಗಿ ನಡೆದಿದೆ. ಮುಂದೆ ಬಾಕಿ ಇರುವ ಪರೀಕ್ಷೆಗಳ ಯಶಸ್ಸಿಗೂ ಅವರ ಬದ್ಧತೆ ಇದೇ ರೀತಿ ಇರಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯವಸ್ಥೆಯ ಕುರಿತು ವಿಶ್ವಾಸವನ್ನಿಟ್ಟುಕೊಳ್ಳಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು.
ಈ ಸಾಮಾಜಿಕ ಪರಿಸ್ಥಿತಿಯ ಮಧ್ಯೆಯೂ ನಡೆದ ಇಂದಿನ ಪರೀಕ್ಷೆಯ ಹಾಜರಾತಿ, ಯಶಸ್ಸು ಎಲ್ಲವೂ ಸಹ ನಮ್ಮ ಪೋಷಕರ ಮತ್ತು ಮಕ್ಕಳ ಗಟ್ಟಿತನದ ಪ್ರತೀಕವಾಗಿದೆ ಎಂದು ಶ್ಲಾಘಿಸಿದರು.
ಎಫ್ಐಆರ್ ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಎಸ್ಸೆಸ್ಸೆಲ್ಸಿ ಆಂಗ್ಲ ಭಾಷಾ ಪತ್ರಿಕೆ ಎಂದು ನಕಲಿ ಪ್ರಶ್ನೆಪತ್ರಿಕೆ ಹರಿ ಬಿಟ್ಟ ವ್ಯಕ್ತಿ ವಿರುದ್ಧ ಇನ್ಫರ್ಮೇಷನ್ ಟೆಕ್ನಾಲಜಿ ಆಕ್ಟ್ 2000, ಐಪಿಸಿ ಆಕ್ಟ್ ಪ್ರಕಾರ ಎಫ್ಐಆರ್ ದಾಖಲಾಗಿದೆ.
ಸಾರ್ವಜನಿಕರು-ಪೋಷಕರಲ್ಲಿ ಮನವಿ
ಇಂದಿನ ಪರೀಕ್ಷೆ ಸಮಯ ಮುಗಿದ ನಂತರ ಹಲವು ಪರೀಕ್ಷಾ ಕೇಂದ್ರಗಳ ಬಳಿ ಪೋಷಕರು ಗುಂಪುಗುಂಪಾಗಿ ನಿಂತಿದ್ದು, ಸಾಮಾಜಿಕ ಅಂತರಕ್ಕೆ ವ್ಯತ್ಯಯ ಉಂಟಾಗಿದೆ ಎಂಬ ಬೆರಳೆಣಿಕೆಯ ಸಂಗತಿಯ ವರದಿಗಳಿವೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ಆ ರೀತಿ ಗುಂಪುಗೂಡದೇ ಸಾಮಾಜಿಕ ಅಂತರ ಕಾಪಾಡಿ ಪರೀಕ್ಷೆಯ ಯಶಸ್ಸಿಗೆ ಸಹಕರಿಸಬೇಕೆಂದು ಸಚಿವರು ಕೋರಿದರು.