ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂ.29) ಸೈಕಲ್ ಚಳವಳಿ ಹಮ್ಮಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.
ಹೋರಾಟದ ರೂಪುರೇಷೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು.
ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತಿತರ ವಿಷಯಗಳನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮುಳುಗಿಸಲು ಸಭೆಯಲ್ಲಿ ನಾಯಕರು ತೀರ್ಮಾನಿಸಿದ್ದಾರೆ.
ಈ ಕುರಿತು ಮಾತನಾಡಿದ ಶಿವಕುಮಾರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಇದೇ 29 ರಂದು ಸೈಕಲ್ ಚಳವಳಿ ಹಮ್ಮಿಕೊಳ್ಳುತ್ತೇವೆ. ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಮಾಡಲು ಕಾರ್ಯಕರ್ತರು ಸಜ್ಜಾಗಿದ್ದು, ಇನ್ನು ನಾನು ಮತ್ತು ಸಿದ್ದರಾಮಯ್ಯ ಅಂದು ಸೈಕಲ್‌ನಲ್ಲಿ ಓಡಾಡುತ್ತೇವೆ. ಕಾರ್ಯಕರ್ತರು ಕೂಡ ಈ ಚಳವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ವಿವಿಧ ರೀತಿಯ ಹೋರಾಟ ಅನಿವಾರ್ಯವಾಗಿದೆ ಎಂದು ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.
ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರಕಾರ ಸುಮಾರು 18 ಲಕ್ಷ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್ ಡೀಸೆಲ್ ಇಪ್ಪತ್ತೈದು ರೂಪಾಯಿ ಆಸುಪಾಸಿನಲ್ಲಿ ಇರಬೇಕಿತ್ತುಎಂದರು.
ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಹೊಡೆದಿದೆ. ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ ಎಂದು ಗುಡುಗಿದರು.
ಇನ್ನು ಸಾಮಾನ್ಯ ಜನರಿಗೆ ಕೊರೊನಾ ಪಾಸಿಟಿವ್ ಇದೆ ಎಂದು ದೃಢಪಟ್ಟರು ಅವರನ್ನು ಕೋವಿಡ್ ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಸರ್ಕಾರ ಸೋತಿದೆ. ಈ ಎಲ್ಲದರ ವಿರುದ್ಧ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಸಭೆಯಲ್ಲಿ ಎಲ್ಲಾ ನಾಯಕರು ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
Madi madi enu prayojana illa ansuthe nachike anjike bittavarige ene madidru aste ansuthe