ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂ.29) ಸೈಕಲ್ ಚಳವಳಿ ಮಾಡಿದ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿದರು.
ಅಲ್ಲದೆ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರಾಜ್ಯ ಸರ್ಕಾರದ ರೈತರ ಜತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಕಳೆದ 15ದಿನಗಳಿಂದ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಾ ಬಂದಿದೆ. ಇದರಿಂದ ಜನ ಸಾಮಾನ್ಯರ ಜೀವನ ಕಷ್ಟಕರವಾಗುತ್ತಿದೆ. 25ರೂ. ಆಸುಪಾಸಿನಲ್ಲೇ ಸಿಗುವ ಇಂಧನವನ್ನು 82 ರೂ.ಗೆ ಮಾರಾಟ ಮಾಡುವುದು ಎಷ್ಟು ಸರಿ ಎಂದು ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಮಾತನಾಡಿ, ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ವಿವಿಧ ರೀತಿಯ ಹೋರಾಟ ಅನಿವಾರ್ಯವಾಗಿದೆ ಎಂದರು.
ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರಕಾರ ಸುಮಾರು 18 ಲಕ್ಷ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್ ಡೀಸೆಲ್ ಇಪ್ಪತ್ತೈದು ರೂಪಾಯಿ ಆಸುಪಾಸಿನಲ್ಲಿ ಇರಬೇಕಿತ್ತು. ಆದರೆ ಸುಮಾರು 82 ರೂ.ಗಳಿಗೆ ಮಾರಾಟ ಮಾಡುತ್ತಿದೆ ಎಂದು ಕಿಡಿಕಾರಿದರು.
ಇನ್ನು ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಹೊಡೆದಿದೆ. ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ ಎಂದು ಗುಡುಗಿದರು.
ಸಾಮಾನ್ಯ ಜನರಿಗೆ ಕೊರೊನಾ ಪಾಸಿಟಿವ್ ಇದೆ ಎಂದು ದೃಢಪಟ್ಟರು ಅವರನ್ನು ಕೋವಿಡ್ ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಸರ್ಕಾರ ಸೋತಿದೆ ಎಂದು ಆರೋಪಿಸಿದರು.
ಪೆಟ್ರೋಲ್ ಟ್ಯಾಂಕರ್ ಮೇಲೆ ಏರಿದ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಧಿಕ್ಕಾರ ಕೂಗಿದರು.
ಪ್ರತಿಭಟನೆ ವೇಳೆ ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಸೇರಿದ್ದು, ಕೆಲವರು ಮಾಸ್ಕ್ ಹಾಕಿರಲಿಲ್ಲ. ಜತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾದರು. ಇದರಿಂದ ಸಾಮಾನ್ಯ ಜನರಿಗೊಂದು ನ್ಯಾಯ ರಾಜಕಾರಣಿಗಳಿಗೊಂದು ನ್ಯಾಯವ ಎಂಬ ಕೂಗು ಕೇಳಿಬಂದಿತು.