
ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಹಾಗೂ ರಾಜ್ಯ ಒಲಂಪಿಕ್ ಅಸೋಸಿಯೇಷನ್ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಪುಟಾಣಿ ಕ್ರೀಡಾಳುಗಳಿಗೆ ಶುಭ ಹಾರೈಸಿ ಮಾತನಾಡಿದರು.
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ ಎಂದು ಕರೆ ನೀಡಿದರು.
ಇನ್ನು ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ. ಇದನ್ನು ಮೊದಲು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇನ್ನು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.
ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದ್ದೇವೆ. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರಬೇಕು ಎನ್ನುವುದು ನಮ್ಮ ಬಯಕೆ. ಇದಕ್ಕೆ ಬೇಕಾದ ಎಲ್ಲ ನೆರವನ್ನು ನಾವು ನೀಡಲಿದ್ದೇವೆ ಎಂದರು.

ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಶಾಸಕ ಅರ್ಷದ್ ರಿಜ್ವಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Related









