NEWSನಮ್ಮರಾಜ್ಯ

ಮಾಜಿ ಸಚಿವ, ಬಾಗಲಕೋಟೆಯ ಕಾಂಗ್ರೆಸ್ ಹಾಲಿ ಶಾಸಕ ಎಚ್‌.ವೈ.ಮೇಟಿ ನಿಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಸಚಿವ, ಬಾಗಲಕೋಟೆಯ ಕಾಂಗ್ರೆಸ್ ಹಾಲಿ ಶಾಸಕ ಹುಲ್ಲಪ್ಪ ಮೇಟಿ (79) ಇಂದು ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಎಚ್.ವೈ.ಮೇಟಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.

ಈ ಹಿಂದೆ 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್.ವೈ.ಮೇಟಿ ಅಬಕಾರಿ ಸಚಿವರಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.

ಇತ್ತೀಚೆಗಷ್ಟೇ ಮೇಟಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಅವರ ಪಾರ್ಥಿವ ಶರೀರದ ದರ್ಶನ ಪಡೆದರು.

ಎಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.

ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಭಿಮಾನಿಗಳನ್ನು ಅಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ: ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ.

ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ: ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಗಿದೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ