NEWSನಮ್ಮಜಿಲ್ಲೆನಮ್ಮರಾಜ್ಯ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ: ರಾಜ್ಯದ ಗಣ್ಯರರಿಂದ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು.

ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು.

ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು. – ಮುಖ್ಯಮಂತ್ರಿ ಸಿದ್ದರಾಮಯ್ಯ.

ವಿಪಕ್ಷ ನಾಯಕ ಆರ್‌.ಅಶೋಕ್‌: ರಸ್ತೆ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ‘ಮರಗಳೇ ನನ್ನ ಮಕ್ಕಳು’ ಎಂದು ಘೋಷಿಸಿದ ವೃಕ್ಷಮಾತೆ, ನಮ್ಮ ಹೆಮ್ಮೆಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.

ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಪರಿಸರ ಸೇವೆಯನ್ನೇ ಮಾದರಿಯಾಗಿಸಿಕೊಂಡು ನಮ್ಮ ಸುತ್ತಮುತ್ತಲಿನ ಪರಿಸರವನ್ನ ಉಳಿಸಿ, ಬೆಳೆಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ: ಪರಿಸರಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಿಟ್ಟು ಪ್ರಕೃತಿಗಾಗಿಯೇ ಬದುಕಿ ಬಾಳಿದ ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು.

ನಾಡಿಗೆ ಅವರು ನೀಡಿರುವ ಕೊಡುಗೆ, ಅವರಿಂದ ದೊರೆತಿರುವ ಪ್ರೇರಣೆ ಅಜರಾಮರ. ಅಗಲಿದ ಆ ಚೇತನಕ್ಕೆ ಚಿರಶಾಂತಿ ದೊರೆಯಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ

ಡಿಸಿಎಂ ಡಿ.ಕೆ.ಶಿವಕುಮಾರ್‌: ಉಸಿರು ಚೆಲ್ಲಿದ “ವೃಕ್ಷಮಾತೆ”: ಮರಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಸಲಹಿದ ʻವೃಕ್ಷಮಾತೆʼ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾದ ಸುದ್ದಿ ಅತೀವ ದುಖಃ ನೀಡಿದೆ. ನಿಸರ್ಗ ಪ್ರೀತಿಯ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಅವರ ಅಸಾಮಾನ್ಯ ಬದುಕು ಮತ್ತು ಪರಿಸರಕ್ಕೆ ಅವರ ಕೊಡುಗೆ ಚಿರಸ್ಮರಣೀಯ.

ವೃಕ್ಷಮಾತೆ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕಾರ್ಯ ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿ ಉಳಿಯಲಿದೆ. ಓಂ ಶಾಂತಿ.

Megha
the authorMegha

Leave a Reply

error: Content is protected !!