ಚಿಕ್ಕಬಳ್ಳಾಪುರ: ಬಿಜೆಪಿಯವರು ನಮ್ಮ ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2,000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಿಲ್ಲೆಯ ಶಿಡ್ಲಘಟ್ಟದಲ್ಲಿ ಸೋಮವಾರ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.
ಇನ್ನು ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದು ವ್ಯಂಗ್ಯವಾಡಿದರು.
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆಯುವ ಸರ್ಕಾರ ಎಂದು ಹೇಳಿದ್ದೆವು, ಅದರಂತೆ ನಡೆದಿದ್ದೇವೆ ಎಂದರು.
ಸರ್ಕಾರದಲ್ಲಿ ಯಾವುದೇ ಬದಲಾವಣೆ ಮಾಡುವ ಸಂಬಂಧ ನಮ್ಮಲ್ಲಿ ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಒಪ್ಪಬೇಕು ಎಂದು ಸಿಎಂ ಬದಲಾವಣೆ ಬಗ್ಗೆ ಈ ರೀತಿ ಪ್ರತಿಕ್ರಿಯಿಸಿದರು.
ಇನ್ನು ಹೈಕಮಾಂಡನ್ನು ಐದು ತಿಂಗಳ ಹಿಂದೆ ಭೇಟಿಯಾದಾಗ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇನೆ ಎಂದರು
Related










