ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದದಲ್ಲೇ ಕೊಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆದಿರುವ ಎಲ್ಲಾ ವಿಷಯಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು ಅದು 10ದಿನದಲ್ಲೇ ಪೂರ್ಣವಾಗಲಿದೆ ಎಂದು ತಿಳಿಸಿದರು.
ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು, ಅವರಿಗೆ ಸೋಂಕು ಹರಡದ ರೀತಿಯಲ್ಲಿ ಎಲ್ಲಾ ಮುಂಜಾಗ್ರತ ಕ್ರಮಗಳೊಂದಿಗೆ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲಾ ಕೇಂದ್ರಗಳಲ್ಲಿಯೂ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಇನ್ನು 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.