ಮಂಡ್ಯ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಕೆರೆ ಕಾಮೇಗೌಡರ ಆರೋಗ್ಯ ಗಂಭೀರ ಸ್ವರೂಪ ಪಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಾಮೇಗೌಡ ಅವರನ್ನು ಮಂಡ್ಯ ದೊಡ್ಡಾಸ್ಪತ್ರೆಗೆ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಕಾಮೇಗೌಡ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒದಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಫೂರ್ತಿಯಾಗಿರುವ ಕಾಮೇಗೌಡ ಅವರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
85 ವರ್ಷದ ಕಾಮೇಗೌಡ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಸಮಸ್ತ ನಾಡಿನ ಜನತೆ ಪ್ರಾರ್ಥಿಸುತ್ತಿದ್ದಾರೆ.