ಬೆಂಗಳೂರು: ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಪಿಂಚಣಿ ಕೈಗೆ ಸಿಗದೇ ಅಗತ್ಯ ಔಷಧಗಳನ್ನು ಕೊಳ್ಳಲೂ ಈ ಫಲಾನುಭವಿಗಳು ಪರದಾಡುತ್ತಿದ್ದಾರೆ. ಹಲವು ಮಂದಿಗೆ ಊಟಕ್ಕೂ ತತ್ವಾರವಾಗಿದೆ. ವರ್ಷಾಚರಣೆಯ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರ ಮೊದಲು ಹಣ ಬಿಡುಗಡೆಗೆ ಆದೇಶ ಮಾಡುವಂತೆ ಒತ್ತಾಯಿಸಿದ್ದಾರೆ.
ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳನ್ನು ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಕಿಡಿಕಾರಿದ್ದಾರೆ.
ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
4/4— H D Kumaraswamy (@hd_kumaraswamy) July 27, 2020